ಹೊಸದಿಗಂತ ವರದಿ,ಮೈಸೂರು:
ರಾಜ್ಯದಲ್ಲಿ ಬರಗಾಲ ಬಂದು ಐದು ತಿಂಗಳಾದರೂ ರಾಜ್ಯಕ್ಕೆ ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಬರ ಪರಿಹಾರಲ್ಲಿ ಒಂದೇ ಒಂದು ರೂಪಾಯಿ ಕೂಡ ಕೊಟ್ಟಿಲ್ಲ. ಹಾಗಾಗಿ ನಾವು ಬರಪರಿಹಾರದ ಹಣ ಪಡೆಯು ಸುಪ್ರೀಂಕೋರ್ಟ್ ಗೆ ಹೋಗಬೇಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೂರು ಜಿಲ್ಲೆಗಳ ವ್ಯಾಪ್ತಿಯ ಸಚಿವರು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಮುಖಂಡರು, ಬೋರ್ಡ್ ಅಧ್ಯಕ್ಷರುಗಳು, ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು,ಅನ್ನ ಭಾಗ್ಯ ಯೋಜನೆ ಜಾರಿಗಾಗಿ ಮೊದಲು ರಾಜ್ಯದ ಜನರಿಗೆ ಅಕ್ಕಿ ಕೊಡ್ತೀವಿ. ದುಡ್ಡು ತಗೊಂಡು ಅಕ್ಕಿ ಕೊಡಿ ಎಂದು ಕೇಂದ್ರ ಸರ್ಕಾರವನ್ನು ಕೇಳಿದರೂ ಅವರು ಕೊಡಲಿಲ್ಲ. ಈಗ ರಾಜ್ಯದ ಪಾಲಿನ ಬರ ಪರಿಹಾರದ ಹಣ ನಮಗೆ ಕೊಡಿ ಎಂದರೂ ಕೊಡುತ್ತಿಲ್ಲ. ನಮ್ಮ ತೆರಿಗೆ ಹಣಕ್ಕೆ ಬೆಲೆ ಇಲ್ಲವಾ? ನಮ್ಮ ರಾಜ್ಯದ ಜನರ ಬೇಡಿಕೆಗೆ ಬೆಲೆ ಇಲ್ಲವಾ? ಎಂದು ಖಾರವಾಗಿ ಪ್ರಶ್ನಿಸಿ ಕಿಡಿಕಾರಿದರು.
ಸೆಕ್ಯುಲರ್ ಏನಾಯ್ತು?
ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗ್ತೀನಿ ಅಂದಿದ್ದ ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೀನಿ ಎಂದಿದ್ದರು. ಆದರೆ ಈಗ ಬಿಜೆಪಿ ಜತೆ ಸೇರಿದ್ದಾರೆ. ತಮ್ಮ ಅಳಿಯ ಡಾ.ಮಂಜುನಾಥ್ ಅವರನ್ನು ಬಿಜೆಪಿಗೆ ಕಳಿಸಿದ್ದಾರೆ. ಮೊದಲು ನೀನು ಹೋಗಿರು, ನಾವೂ ಆಮೇಲೆ ಬರ್ತೀವಿ ಎನ್ನುವ ರೀತಿ ಅಳಿಯನನ್ನು ಬಿಜೆಪಿಗೆ ಕಳಿಸಿದ್ದಾರೆ. ಅದಕ್ಕೇ ತಮ್ಮ ಪಕ್ಷದ ಹೆಸರಿನಲ್ಲಿರುವ ಜಾತ್ಯತೀತ ಪದವನ್ನು ತೆಗೆದುಹಾಕುವುದು ಉತ್ತಮ ಎಂದು ಲೇವಡಿ ಮಾಡಿದರು.