ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಚಿವರು ಮತ್ತು ಶಾಸಕರ ಕಚೇರಿಗಳಲ್ಲಿ ರಾಜಕೀಯ ಚಟುವಟಿಕೆಗಳು ನಡೆಯುತ್ತಿದೆ ಎಂದು ಬಿಜೆಪಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.
ಪಕ್ಷದ ಶಾಸಕ ಹಾಗೂ ಮಾಜಿ ಸಚಿವ ಎಸ್ ಸುರೇಶ್ ಕುಮಾರ್ ನೇತೃತ್ವದ ಬಿಜೆಪಿ ಮುಖಂಡರ ನಿಯೋಗ ಕಾಂಗ್ರೆಸ್ ಸಚಿವರು ಮತ್ತು ಶಾಸಕರು ಸರ್ಕಾರಿ ಕಟ್ಟಡಗಳಲ್ಲಿ ಯಾವುದೇ ರಾಜಕೀಯ ಚಟುವಟಿಕೆ ನಡೆಸದಂತೆ ನಿರ್ಬಂಧಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿಧಾನಸೌಧವನ್ನೇ ಕಾಂಗ್ರೆಸ್ ಕಚೇರಿ ಎಂದು ಭಾವಿಸಿರುವಂತಿದೆ. ಮಾರ್ಚ್ 30ರಂದು ಶಿವಕುಮಾರ್ ಅವರು ನಜ್ಮಾ ನಜೀರ್ ಚಿಕ್ಕನೇರಳೆರನ್ನು ವಿಧಾನಸೌಧದ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡು ಈ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಹೇಳಿದೆ.
ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಇದು ರಾಜ್ಯದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅವರ ಮೂಗಿನ ಕೆಳಗೆ ನಡೆಯುತ್ತಿದ್ದರೂ, ಅವರ ಸ್ಪಷ್ಟ ನಿಷ್ಕ್ರಿಯತೆ ಆತಂಕಕಾರಿಯಾಗಿದೆ ಎಂದು ಆರೋಪಿಸಿದರು.