ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಏಪ್ರಿಲ್ 17ರಂದು ಮಂಡ್ಯದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ. ಅದಾದ ನಂತರ ಕೋಲಾರಕ್ಕೂ ಬರಲಿದ್ದಾರೆ ಎಂದು ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಮಾಹಿತಿ ನೀಡಿದ್ದಾರೆ.
ರಾಹುಲ್ ಗಾಂಧಿಯವರ ವ್ಯಕ್ತಿತ್ವವನ್ನು ತೇಜೋವಧೆ ಮಾಡುವುದನ್ನು ಬಿಜೆಪಿ ಕಾಯಂ ಕಾರ್ಯಸೂಚಿಯನ್ನಾಗಿ ಮಾಡಿಕೊಂಡಿದೆ. ರಾಹುಲ್ ಗಾಂಧಿಯವರ ವ್ಯಕ್ತಿತ್ವ ಏನು ಎನ್ನುವುದು ದೇಶದ ಜನರಿಗೆ ಚೆನ್ನಾಗಿ ಗೊತ್ತಿದೆ. ಈ ಬಾರಿ ಕಾಂಗ್ರೆಸ್ ಗೆಲುವನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದಿದ್ದಾರೆ.
ಏಪ್ರಿಲ್ ೧೭ರ ಬೆಳಗ್ಗೆ ಬೆಂಗಳೂರಿಗೆ ಆಗಮಿಸುವ ರಾಹುಲ್ ಗಾಂಧಿ ರಾಜ್ಯ ನಾಯಕರೊಂದಿಗೆ ಮೊದಲು ಮಂಡ್ಯ ಜಿಲ್ಲೆಗೆ ತೆರಳಿ ಪಕ್ಷದ ಅಭ್ಯರ್ಥಿ ವೆಂಕಟರಮಣೇಗೌಡ ಪರ ಕ್ಷೇತ್ರದ ವಿವಿಧೆಡೆ ಪ್ರಚಾರ ನಡೆಸಲಿದ್ದಾರೆ. ನಂತರ ಸಂಜೆ ಕೋಲಾರಕ್ಕೆ ತೆರಳಿ ಪಕ್ಷದ ಅಭ್ಯರ್ಥಿ ಕೆ.ವಿ.ಗೌತಮ್ ಪರವಾಗಿ ಕ್ಷೇತ್ರದ ಹಲವೆಡೆ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಇದೇ ವೇಳೆ ಬೆಂಗಳೂರಿನಲ್ಲಿ ರೋಡ್ ಶೋ ನಡೆಸುವ ಯೋಜನೆಯೂ ಇದ್ದು, ಅದು ಇನ್ನೂ ಖಚಿತಗೊಂಡಿಲ್ಲ.