Sunday, January 11, 2026

ಸಂತ್ರಸ್ತ ಮಹಿಳೆಗೆ ನ್ಯಾಯ ಸಿಗಲಿ: ಕರ್ನಾಟಕ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗದ ಖಡಕ್ ಸೂಚನೆ

ಹೊಸದಿಗಂತ ಹುಬ್ಬಳ್ಳಿ:

ನಗರದಲ್ಲಿ ಮಹಿಳೆಯೊಬ್ಬರನ್ನು ಬಂಧಿಸುವ ವೇಳೆ ಆಕೆಯ ಬಟ್ಟೆ ಹರಿದು, ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಗಂಭೀರ ಪ್ರಕರಣವನ್ನು ರಾಷ್ಟ್ರೀಯ ಮಹಿಳಾ ಆಯೋಗವು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಘಟನೆಯ ಕುರಿತು ಆಯೋಗವು ಸ್ವಯಂ ಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದು, ತಪ್ಪಿತಸ್ಥರ ವಿರುದ್ಧ ಸಮರ ಸಾರಿದೆ.

ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ವಿಜಯ ರಾಹತ್ಕರ್ ಅವರು ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ.

ಒಂದು ವೇಳೆ ಪೊಲೀಸ್ ಠಾಣೆಯಲ್ಲಿ ಇನ್ನೂ ಎಫ್‌ಐಆರ್ ದಾಖಲಾಗದಿದ್ದರೆ, ಕೂಡಲೇ ಅದನ್ನು ದಾಖಲಿಸಿಕೊಳ್ಳಬೇಕು. ಲಭ್ಯವಿರುವ ವಿಡಿಯೋ ಸಾಕ್ಷ್ಯಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ನಿಗದಿತ ಕಾಲಮಿತಿಯೊಳಗೆ ಪಾರದರ್ಶಕ ತನಿಖೆ ನಡೆಸಬೇಕು. ತನಿಖೆಯಲ್ಲಿ ಲೋಪ ಕಂಡುಬಂದಲ್ಲಿ ಅಥವಾ ದುಷ್ಕೃತ್ಯ ಸಾಬೀತಾದಲ್ಲಿ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಇಲಾಖಾ ಮತ್ತು ಕ್ರಿಮಿನಲ್ ಕ್ರಮಗಳನ್ನು ಜರುಗಿಸಬೇಕು. ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (DGP) ಪತ್ರ ಬರೆಯಲಾಗಿದ್ದು, ಸಂತ್ರಸ್ತ ಮಹಿಳೆಗೆ ಸೂಕ್ತ ವೈದ್ಯಕೀಯ ನೆರವು, ಮಾನಸಿಕ ಬೆಂಬಲ, ಪುನರ್ವಸತಿ ಮತ್ತು ನ್ಯಾಯಸಮ್ಮತ ಪರಿಹಾರವನ್ನು ಒದಗಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಪೊಲೀಸ್ ಇಲಾಖೆಯು ಈ ಪ್ರಕರಣದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮುಂದಿನ 5 ದಿನಗಳ ಒಳಗಾಗಿ ಸಮಗ್ರ ಮತ್ತು ವಿವರವಾದ ವರದಿಯನ್ನು ಸಲ್ಲಿಸಬೇಕೆಂದು ಆಯೋಗವು ಕಟ್ಟುನಿಟ್ಟಿನ ಆದೇಶ ನೀಡಿದೆ.

error: Content is protected !!