ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಈಗಾಗಲೇ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೈಲಿನಿಂದ ಬಿಡುಗಡೆ ಮಾಡಿದ ಪ್ರಯತ್ನಗಳು ವಿಫಲವಾಗಿದೆ. ಇದರ ಬೆನ್ನಲ್ಲೇ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ 2 ಜಾಮೀನಿಗಾಗಿ ರೋಸ್ ಅವೆನ್ಯೂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ.
ಬಂಧನವೇ ಅಕ್ರಮ ಎಂದಿರುವ ಆಪ್ ನಾಯಕರಿಗೆ ಜಾಮೀನು ಪಡೆಯಲು ಸಾಧ್ಯವಾಗುತ್ತಿಲ್ಲ. ಮನೀಸ್ ಸಿಸೋಡಿಯಾ ತನಿಖೆ ವಿಳಂಭವಾಗುತ್ತಿರುವ ಕಾರಣ ಮುಂದಿಟ್ಟು ಜಾಮೀನು ನೀಡುವಂತೆ ರೋಸ್ ಅವೆನ್ಯೂ ಕೋರ್ಟ್‌ಗೆ 2ನೇ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಇಡಿ ಹಾಗೂ ಸಿಬಿಐ ಎರಡೂ ತನಿಖಾ ಸಂಸ್ಥೆಗಳು ಸಿಸೋಡಿಯಾಗೆ ಜಾಮೀನು ನೀಡದಂತೆ ವಾದ ಮಂಡಿಸಿತ್ತು.
ಜಸ್ಟೀಸ್ ಸಂಜೀವ್ ಖನ್ನ, ದೀಪಾಂಕರ್ ದತ್ತಾ ಒಳಗೊಂಡ ಪೀಠ ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆ ನಡೆಸಿತ್ತು. ಬಳಿಕ ಈ ಅರ್ಜಿಯನ್ನು ತಿರಸ್ಕರಿಸಿತು. ರೋಸ್ ಅವೆನ್ಯೂ ಕೋರ್ಟ್ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಇದೀಗ ಮನೀಶ್ ಸಿಸೋಡಿಯಾ ದೆಹಲಿ ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.
ಇತ್ತ ದೆಹಲಿ ಅಬಕಾರಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ ಕೆ.ಕವಿತಾ ಅವರ ನ್ಯಾಯಾಂಗ ಬಂಧನ ಮೇ 7ರವರೆಗೆ ವಿಸ್ತರಿಸಿದೆ. ಮೇ.7ರಂದು ಕೇಜ್ರಿವಾಲ್ ಹಾಗೂ ಕವಿತಾರನ್ನು ಮತ್ತೆ ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ. ಇದರ ನಡುವೆ ಕೇಜ್ರಿವಾಲ್ ಕೂಡ ಜಾಮೀನುಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಕೇಜ್ರಿವಾಲ್ ಅರ್ಜಿಯನ್ನು ಕೋರ್ಟ್ ಪುರಸ್ಕರಿಸಿಲ್ಲ.