ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಾಗಿ ವಿವೇಕಾನಂದ.ಕೆ ಅವರ ಹೆಸರನ್ನು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ.
ಈ ಮೊದಲು ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಡಾ.ಇ.ಸಿ.ನಿಂಗರಾಜೇಗೌಡ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿತ್ತು. ಆದರೆ, ಇದೀಗ ಟಿಕೆಟ್ ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದರಿಂದ ಅಸಮಾಧಾನಗೊಂಡಿರುವ ಡಾ.ಇ.ಸಿ.ನಿಂಗರಾಜೇಗೌಡ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಬೆಂಬಲಿಗರ ಜತೆ, ಬಿಜೆಪಿ ಘೋಷಿತ ಅಭ್ಯರ್ಥಿ ಡಾ.ಇ.ಸಿ.ನಿಂಗರಾಜೇಗೌಡ ಅವರು ಬಿ ಫಾರ್ಮ್ ಇಲ್ಲದೆ ಬುಧವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಳೆ ವರಿಷ್ಠರ ಜತೆ ಚರ್ಚೆ ಮಾಡಿ ಮತ್ತೊಮ್ಮೆ ನಾಮಪತ್ರ ಸಲ್ಲಿಸುತ್ತೇನೆ ಎಂದು ಡಾ.ಇ.ಸಿ.ನಿಂಗರಾಜೇಗೌಡ ಹೇಳಿದ್ದಾರೆ.
ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಬಿಜೆಪಿ ಘೋಷಿತ ಅಭ್ಯರ್ಥಿ ಡಾ.ಇ.ಸಿ.ನಿಂಗರಾಜೇಗೌಡ, ಶಾಸ್ತ್ರ ಸಂಪ್ರದಾಯ ಮೇಲೆ ನಾವು ನಂಬಿಕೆ ಇಟ್ಟಿದ್ದೇವೆ. ಇಂದು ದಿನ ಚೆನ್ನಾಗಿದೆ ಎಂದು ನಾಮಪತ್ರ ಸಲ್ಲಿಸಿದ್ದೇನೆ. ನಾಳೆ 11 ಗಂಟೆಗೆ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ. ನನಗೆ ಸಂಪೂರ್ಣವಾದ ನಂಬಿಕೆ ಇದೆ. ನಾಳೆ ಬಿ ಫಾರ್ಮ್ ಜತೆ ನಾಮಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ಜೆಡಿಎಸ್ ವಿವೇಕಾನಂದಗೆ ಬಿ ಫಾರಂ ನೀಡಿರುವ ವಿಚಾರ ನನಗೆ ಗೊತ್ತಿಲ್ಲ. ಬಿಜೆಪಿ ಏಕಾಏಕಿ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಜೆಡಿಎಸ್ ನಾಯಕರ ಜತೆ ಚರ್ಚಿಸಿ, ಬಿಜೆಪಿ ಆಕಾಂಕ್ಷಿಗಳ ಅಭಿಪ್ರಾಯ ಸಂಗ್ರಹಿಸಿ ನನ್ನನ್ನು ಫೈನಲ್ ಮಾಡಿದೆ. ಒಮ್ಮೆ ಅಭ್ಯರ್ಥಿ ಘೋಷಣೆ ಬಳಿಕ ಬದಲಾವಣೆ ಮಾಡುವ ಪ್ರಶ್ನೆ ಬರಲ್ಲ. ರಾಜ್ಯ ಬಿಜೆಪಿ ನಾಯಕರು ಕರೆದಿದ್ದಾರೆ. ಇಂದು ಸಂಜೆ ಬೆಂಗಳೂರಿಗೆ ತೆರಳುತ್ತಿದ್ದೇನೆ. ನಾಳೆ ಬೆಳಗ್ಗೆ ನಾಮಪತ್ರ ಸಲ್ಲಿಕೆಗೂ ಮುನ್ನ ಸಭೆ ನಡೆಸಿ ಬಳಿಕ ನಾಮಪತ್ರ ಸಲ್ಲಿಸುತ್ತೇನೆ. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಹೇಳಿದ್ದಾರೆ.