ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮ್ಮ ಅಧಿಕಾರಾವಧಿಯಲ್ಲಿ ಕಾಂಗ್ರೆಸ್ ಮತ್ತು ಗಾಂಧಿ ಕುಟುಂಬ ಸಂವಿಧಾನ ತಿದ್ದುಪಡಿ ಮಾಡಿದೆ ಎಂದು ಟೀಕಿಸಿದ ಪ್ರಧಾನಿ ನರೇಂದ್ರ ಮೋದಿ, ತಾನು ಬದುಕಿರುವಾಗ ಯಾರನ್ನೂ ಸಂವಿಧಾನದ ತಳಹದಿಯೊಂದಿಗೆ ಆಟವಾಡಲು ಬಿಡುವುದಿಲ್ಲ ಎಂದು ಹೇಳಿದರು.
ಗಾಂಧಿ ಕುಟುಂಬದ ಮಾಜಿ ಪ್ರಧಾನಿಗಳಾದ ಜವಾಹರ್ ಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ರಾಜಕೀಯ ಉದ್ದೇಶಕ್ಕಾಗಿ ಸಂವಿಧಾನವನ್ನು ದುರ್ಬಳಕೆ ಮಾಡಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು.
ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನಕ್ಕೆ ತಿದ್ದುಪಡಿ ತರಲಾಗುವುದು ಎಂಬ ಪ್ರತಿಪಕ್ಷಗಳ ಹೇಳಿಕೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಧಾನಿ ಮೋದಿ, “ಸಂವಿಧಾನದೊಂದಿಗೆ ಮೊದಲು ಆಟವಾಡಿದವರು ಯಾರು ಎಂಬ ಪ್ರಶ್ನೆಯನ್ನು ಕೇಳಬೇಕು. ಪಂಡಿತ್ ನೆಹರು ಅವರು ಮೊದಲ ತಿದ್ದುಪಡಿಯನ್ನು ತಂದರು, ವಾಕ್ ಸ್ವಾತಂತ್ರ್ಯವನ್ನು ನಿರ್ಬಂಧಿಸುವುದು ಇದರ ಉದ್ದೇಶವಾಗಿತ್ತು ಎಂದರು.
ತಮ್ಮ ಅಧಿಕಾರಾವಧಿಯಲ್ಲಿ ಧಾರ್ಮಿಕ ಆಧಾರದ ಮೇಲೆ ಯಾವುದೇ ಮೀಸಲಾತಿಯನ್ನು ಸಹಿಸುವುದಿಲ್ಲ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. ಒಂದೇ ಕುಟುಂಬದ ನಾಲ್ವರು ವಿವಿಧ ಕಾಲಘಟ್ಟದಲ್ಲಿ ಸಂವಿಧಾನವನ್ನು ನಾಶಪಡಿಸಿದ್ದಾರೆ. ಮೋದಿ ಬದುಕಿರುವವರೆಗೂ ಸಂವಿಧಾನದ ಮೂಲಭೂತ ಅಂಶಗಳಲ್ಲಿ ಯಾವುದೇ ಬದಲಾವಣೆಗೆ ಅವಕಾಶ ನೀಡುವುದಿಲ್ಲ, ಧಾರ್ಮಿಕ ಆಧಾರದ ಮೇಲೆ ಮೀಸಲಾತಿಗೆ ಅವಕಾಶ ನೀಡುವುದಿಲ್ಲ ಎಂದು ಮೋದಿ ಹೇಳಿದ್ದಾರೆ.