ಹೊಸದಿಗಂತ ವರದಿ, ಮಂಗಳೂರು:
ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಪುಲ ಅವಕಾಶವಿದ್ದು, ಸರ್ಕಾರ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಿದೆ. ಪ್ರವಾಸೋದ್ಯಮ ಅಭಿವೃದ್ಧಿ ಕುರಿತಂತೆ ಹೂಡಿಕೆ ಮಾಡಲು ಮುಂದೆ ಬರುವವರಿಗೆ ಅಗತ್ಯ ಎಲ್ಲಾ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಶನಿವಾರ ದ.ಕ., ಉಡುಪಿ, ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ ಕರಾವಳಿ ಪ್ರವಾಸೋದ್ಯಮ ಸಮಾವೇಶದ ಸಮಾರೋಪದಲ್ಲಿ ಅವರು ಮಾತನಾಡಿದರು.
ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ೫ ವರ್ಷದ ನೀತಿ ಘೋಷಣೆ ಮಾಡಿ ಜಾರಿಗೆ ತಂದಿದ್ದೇವೆ. ಡಿ.ಕೆ.ಶಿವಕುಮಾರ್, ಎಚ್.ಕೆ.ಪಾಟೀಲ್ ಇವರು ಈ ಬಾಗದಲ್ಲಿ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಎಲ್ಲರ ಸಹಾಕಾರದಿಂದ ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯಾಗಲಿದೆ ಎಂದರು.
ಬೆಂಗಳೂರು ಬಿಟ್ಟರೆ ತಲಾ ಆದಾಯ ಹೆಚ್ಚು ಇರುವ ನಗರ ಮಂಗಳೂರು.ದೇಶದಲ್ಲಿ ಮಹಾರಾಷ್ಟ್ರ ಬಿಟ್ಟರೆ ಕರ್ನಾಟವೇ ಆದಾಯದಲ್ಲಿ ಮುಂದೆ ಇದೆ ಎಂದು ಸಿಎಂ ಹೇಳಿದರು.
ಕರಾವಳಿಯಲ್ಲಿ ಅನೇಕ ಮಂದಿ ಬಂಡವಾಳ ಹೂಡಿಕೆ ಮಾಡಲು ಮುಂದೆ ಬಂದು ಸಹಿ ಹಾಕಿದ್ದಾರೆ. ಪ್ರವಾಸೋದ್ಯಮ ಅಭಿವೃದ್ಧಿ ನೆಲೆಯಲ್ಲಿ ಯಾರೇ ಮುಂದೆ ಬಂದರೂ ಸಹಕಾರ ನೀಡಲಾಗುವುದು ಎಂದು ಸಿಎಂ ಹೇಳಿದರು.

