ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಕ್‌ನಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆ ಏರ್‌ಪೋರ್ಟ್‌ನಲ್ಲಿ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ.
ಈಗಾಗಲೇ ಜರ್ಮನಿಯ ಮ್ಯೂನಿಕ್‌ನಿಂದ ಹೊರಟಿರುವ ಲುಫ್ತಾನ್ಸಾ ಏರ್‌ಲೈನ್ಸ್‌ನಲ್ಲಿ ಪ್ರಜ್ವಲ್ ರೇವಣ್ಣ ಆಗಮಿಸುತ್ತಿದ್ದು, ಇಂದು ಮಧ್ಯರಾತ್ರಿ ಬೆಂಗಳೂರಿಗೆ (Bengaluru) ತಲುಪಲಿದ್ದಾರೆ. ಈ ಹಿನ್ನೆಲೆ ಪೊಲೀಸರು ಅಲರ್ಟ್ ಆಗಿದ್ದಾರೆ.
ಪ್ರಜ್ವಲ್ ಆಗಮನದ ವೇಳೆ ಜನ ಸೇರುವ ಸಾಧ್ಯತೆ ಹೆಚ್ಚಾಗಿದ್ದು, ಆದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸಂಚಾರಿ ಪೊಲೀಸರು ಅಲರ್ಟ್ ಆಗಿದ್ದಾರೆ. ಪ್ರಜ್ವಲ್ ಬಂಧನ ಮಾಡಿ ಕರೆದುಕೊಂಡು ಹೋಗುವ ವೇಳೆಗೆ ಯಾವುದೇ ತೊಂದರೆ ಆಗಬಾರದು ಎಂದು ಮುನ್ನೆಚ್ಚರಿಕೆ ವಹಿಸಲಾಗಿದೆ. ಅಲ್ಲದೇ ಏರ್‌ಪೋರ್ಟ್ ರಸ್ತೆಯಲ್ಲಿ ವಾಹನಗಳನ್ನು ನಿಲುಗಡೆ ಮಾಡದಂತೆ ಸೂಚಿಸಿದ್ದು, ಜನಸಂದಣಿ ಸೇರದಂತೆ ಟ್ರಾಫಿಕ್ ಕ್ಲಿಯರ್ ಮಾಡಲಾಗುತ್ತಿದೆ.
ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಟ್ರಾಫಿಕ್ ಪೊಲೀಸರು ಮತ್ತು ಲಾ ಆ್ಯಂಡ್ ಆರ್ಡರ್ ಪೊಲೀಸರು ಭೇಟಿ ನೀಡಿದ್ದು, ಪ್ರಜ್ವಲ್ ಕರೆದೊಯ್ಯುವ ಮಾರ್ಗವನ್ನು ಪರಿಶೀಲನೆ ಮಾಡಿದ್ದಾರೆ.