ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರೀತಿಸಲು ನಿರಾಕರಿಸಿದಕ್ಕೆ ಯುವಕನೋರ್ವ ಯುವತಿಯನ್ನು ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾನೆ.
ಅಮರಾವತಿಯ ಏಳೂರು ಜಿಲ್ಲೆಯಲ್ಲಿ ಘಟನೆ ನಡೆದಿದೆ, ಜಕ್ಕು ರತ್ನ ಗ್ರೇಸ್ (22) ಕೊಲೆಯಾದ ಯುವತಿ. ಏಸುರತ್ನಂ (23) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೇರಿ ಪ್ರಶಾಂತಿ, ಆರೋಪಿ ಹಾಗೂ ಮೃತ ಯುವತಿ ಸ್ನೇಹಿತರಾಗಿದ್ದಾರೆ. ಹಲವು ದಿನಗಳಿಂದ ತನ್ನನ್ನು ಪ್ರೀತಿಸುವಂತೆ ಆರೋಪಿ ಆಕೆಯ ಹಿಂದೆ ಬಿದ್ದಿದ್ದ. ಆದರೆ ಯುವತಿ ಇದಕ್ಕೆ ಒಪ್ಪಿರಲಿಲ್ಲ. ಇದರಿಂದ ಸಿಟ್ಟಾಗಿದ್ದ ಆರೋಪಿಯು ಆಕೆಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ.
ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿಯ ಸ್ಥಿತಿ ಚಿಂತಾಜನಕವಾಗಿದ್ದು, ವೈದ್ಯರು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ಕೊಡುತ್ತಿದ್ದಾರೆ. ಮೃತ ಯುವತಿಯ ಕುಟುಂಬಸ್ಥರಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.