ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಮತ್ತು ಭಾನುವಾರ ಧಾರಾಕಾರ ಮಳೆ ಸುರಿದು ಜನರನ್ನು ಬೆಚ್ಚಿ ಬೀಳಿಸಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸುತ್ತಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಭಾರೀ ಗಾಳಿ, ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮುಂಗಾರು ಪ್ರಭಾವ ಬೀರಿದೆ. ಇದರ ಪ್ರಭಾವದಿಂದ ಜೂ.7ರ ವರೆಗೆ ಭಾರೀ ಮಳೆ, ಗಾಳಿ ಸಂಭವವಿದ್ದು, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ ಹಾಗೂ ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉಳಿದಂತೆ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲೂ ಸಾಧಾರಣ ಮಳೆಯಾಗಲಿದೆ. ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗಲಿದೆ.