ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವಕಪ್ ಟೂರ್ನಿಯ ಮಹತ್ವದ ಪಂದ್ಯದಲ್ಲಿಂದು ಬಲಿಷ್ಠ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಹೀಗಾಗಿ ಭಾರತ ಬ್ಯಾಟಿಂಗ್ ಮಾಡಲಿದೆ.
ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ನ್ಯೂಯಾರ್ಕ್ನ ನಾಸೌ ಕೌಂಟಿ ಇಂಟರ್ನ್ಯಾಷನಲ್ ಸ್ಟೇಡಿಯಂ ಆತಿಥ್ಯ ವಹಿಸಿದೆ. ನಿರೀಕ್ಷೆಯಂತೆಯೇ ಪಾಕಿಸ್ತಾನ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಅಜಂ ಖಾನ್ ತಂಡದಿಂದ ಹೊರಬಿದ್ದಿದ್ದಾರೆ. ಇನ್ನು ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಮೊದಲ ಪಂದ್ಯದಲ್ಲಿ ಐರ್ಲೆಂಡ್ ಎದುರು ಭರ್ಜರಿ ಗೆಲುವು ಸಾಧಿಸಿದ್ದು, ಇದೀಗ ಮತ್ತೊಂದು ಪಂದ್ಯವನ್ನು ಜಯಿಸುವ ಮೂಲಕ ತನ್ನ ಗೆಲುವಿನ ನಾಗಾಲೋಟ ಮುಂದುವರೆಸಿಕೊಂಡು ಹೋಗುವ ವಿಶ್ವಾಸದಲ್ಲಿದೆ.