ಹೊಸದಿಗಂತ ವರದಿ,ಮಂಡ್ಯ :
ಕಾವೇರಿ ವಿಚಾರದಲ್ಲಿ ರಾಜ್ಯ ಮತ್ತು ಜಿಲ್ಲೆಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವ ನಿಟ್ಟಿನಲ್ಲಿ ಮೊದಲು ಕಾರ್ಯೋನ್ಮುಖನಾಗುವುದಾಗಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಭರವಸೆ ನೀಡಿದರು.
ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಮಂಡ್ಯ ಜಿಲ್ಲೆಗೆ ಮೊದಲ ಬಾರಿಗೆ ಶನಿವಾರ ಭೇಟಿ ನೀಡಿ, ಜಿಲ್ಲೆಯ ಗಡಿ ಭಾಗ ನಿಡಘಟ್ಟದಿಂದ ರೋಡ್‌ಶೋ ಮೂಲಕ ಪಟ್ಟಣಕ್ಕೆ ಆಗಮಿಸಿದ ಅವರು, ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು.
ಲೋಕಸಭಾ ಚುನಾವಣಾ ವೇಳೆ ನಾನು ಮಾತು ಕೊಟ್ಟಂತೆ ಕಾವೇರಿ ಸಮಸ್ಯೆಯನ್ನು ಇತ್ಯರ್ಥಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದರು.
ಮಾಜಿ ಪ್ರದಾನಿ ಎಚ್.ಡಿ. ದೇವೇಗೌಡರ ಸಲಹೆ ಮೇರೆಗೆ ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ನೀವು ಕೊಟ್ಟ ಶಕ್ತಿಯನ್ನು ಸದ್ಬಳಕೆ ಮಾಡಿಕೊಂಡು ಕೇಂದ್ರ ಸರ್ಕಾರದೊಂದಿಗೆ ವ್ಯವಹರಿಸಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು.