ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಭೀಕರ ರೈಲು ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ವಿಷಾದ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ರೈಲು ಅಪಘಾತ ದುಃಖಕರವಾಗಿದೆ. ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಘಟನೆಯ ಕುರಿತು ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿ ಅವಲೋಕಿಸಿದ್ದೇನೆ. ಸಂತ್ರಸ್ತರ ನೆರವಿಗಾಗಿ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅಪಘಾತ ನಡೆದ ಸ್ಥಳಕ್ಕೆ ತೆರಳಿದ್ದಾರೆ ಎಂದು ತಿಳಿಸಿದರು.
ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರಿಗೆ 50,000 ರೂ. ನೆರವು ನೀಡುವುದಾಗಿ ಪ್ರಧಾನಿ ಕಾರ್ಯಾಲಯ ಘೋಷಿಸಿದೆ.
ಇನ್ನು ಈ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ಸಿಲ್ಚಾರ್‌ನಿಂದ ಕೋಲ್ಕತ್ತಾದ ಸೀಲ್ದಾಗೆ ಚಲಿಸುತ್ತಿದ್ದ ಸಂದರ್ಭ ನ್ಯೂ ಜಲ್ಪೈಗುರಿ ಸಮೀಪದ ರಂಗಪಾಣಿ ನಿಲ್ದಾಣದ ಬಳಿ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿತಪ್ಪಿವೆ.