ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ರೈಲು ದುರಂತದಲ್ಲಿ ಮೃತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾದ ನ್ಯೂ ಜಲ್ಪೈಗುರಿ ಬಳಿಯ ರಂಗಪಾಣಿ ಎಂಬಲ್ಲಿ ಸೋಮವಾರ ಬೆಳಿಗ್ಗೆ ಕಾಂಚನಜುಂಗಾ ಎಕ್ಸ್ಪ್ರೆಸ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರಿದಿದೆ.
ಇದೀಗ ಮೃತರ ಮತ್ತು ಗಾಯಗೊಂಡವರ ಕುಟುಂಬಗಳಿಗೆ ಪರಿಹಾರ ಧನ ಘೋಷಿಸಲಾಗಿದೆ.
ಪ್ರಧಾನಿ ಮೋದಿ ಅವರು ಮೃತರ ಕುಟುಂಬಕ್ಕೆ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಈತನ್ಮಧ್ಯೆ ಡಾರ್ಜಿಲಿಂಗ್ಗೆ ತೆರಳುತ್ತಿರುವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಮೃತರ ಸಂಬಂಧಿಕರಿಗೆ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2.5 ಲಕ್ಷ ರೂ. ಮತ್ತು ಸಣ್ಣ ಪುಟ್ಟ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರವನ್ನು ಪ್ರಕಟಿಸಿದ್ದಾರೆ.
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ‘ರಕ್ಷಣಾ ಕಲಾರ್ಯಾಚರಣೆ ಸಮರೋಪಾದಿಯಲ್ಲಿ ನಡೆಯುತ್ತಿದೆ. ರೈಲ್ವೆ, ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ತಂಡಗಳು ನೆರವಿಗೆ ಧಾವಿಸಿವೆ. ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದು, ಮೇಲ್ವಿಚಾರಣೆ ನಡೆಸುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.