ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025’ ಈಗ ದೊಡ್ಡ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದೆ. ಈ ಮಸೂದೆಯು ಜನರ ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಉದ್ದೇಶ ಹೊಂದಿದೆ ಎಂದು ಆರೋಪಿಸಿರುವ ಬಿಜೆಪಿ ನಾಯಕರು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮಸೂದೆಯನ್ನು ತಿರಸ್ಕರಿಸುವಂತೆ ಅಥವಾ ರಾಷ್ಟ್ರಪತಿಗಳ ಅಂಗಳಕ್ಕೆ ಕಳುಹಿಸುವಂತೆ ಮನವಿ ಮಾಡಿದ್ದಾರೆ.
ಪ್ರತಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದ ನಿಯೋಗವು 6 ಪುಟಗಳ ಸುದೀರ್ಘ ಅಹವಾಲನ್ನು ಸಲ್ಲಿಸಿದ್ದು, ಮಸೂದೆಯ ಹಿಂದಿನ ಅಪಾಯಗಳ ಬಗ್ಗೆ ರಾಜ್ಯಪಾಲರ ಗಮನ ಸೆಳೆದಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಗಂಭೀರವಾಗಿ ದೂರಿರುವ ಬಿಜೆಪಿ, ಪೊಲೀಸರು ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದೆ. ಹುಬ್ಬಳ್ಳಿಯಲ್ಲಿ ಮಹಿಳಾ ಕಾರ್ಯಕರ್ತೆಯ ಮೇಲೆ ಪೊಲೀಸರೇ ನಡೆಸಿದ್ದಾರೆ ಎನ್ನಲಾದ ಹಲ್ಲೆ ಹಾಗೂ ವಿರೋಧ ಪಕ್ಷದ ನಾಯಕರ ವಿರುದ್ಧ ದಾಖಲಾಗುತ್ತಿರುವ ಸುಳ್ಳು ಪ್ರಕರಣಗಳ ಬಗ್ಗೆ ರಾಜ್ಯಪಾಲರಿಗೆ ಮಾಹಿತಿ ನೀಡಲಾಗಿದೆ.
ಪ್ರಜಾಪ್ರಭುತ್ವ ವಿರೋಧಿ ಧೋರಣೆ ಅನುಸರಿಸುತ್ತಿರುವ ಸರ್ಕಾರದ ವಿರುದ್ಧ ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಸಂಸದ ಗೋವಿಂದ ಕಾರಜೋಳ ಹಾಗೂ ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ.


