ಹೊಸದಿಗಂತ ವರದಿ, ಶಿವಮೊಗ್ಗ:
ರಾಜ್ಯದಲ್ಲಿನ ಭ್ರಷ್ಟಾಚಾರ ವಿರೋಧಿಸಿ ಜುಲೈ 3ರಂದು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಭ್ರಷ್ಟಾಚಾರದ ವಿರುದ್ಧ ಬಿಜೆಪಿ ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದೆ .ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹೋರಾಟ ನಡೆಸಿದೆ. ಹೋರಾಟದ ಫಲವಾಗಿ ಸಚಿವ ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ನಿಗಮದ ಅಧಿಕಾರಿ ಚಂದ್ರಶೇಖರನ್ ಡೆತ್ ನೋಟ್ ನಲ್ಲಿ ಅನೇಕ ಅಂಶ ಉಲ್ಲೇಖ ಆಗಿದೆ. ಆದರೆ ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಇಷ್ಟು ದೊಡ್ಡ ಮಟ್ಟದ ಹಗರಣ ನಡೆದಿದೆ. ವಾಲ್ಮೀಕಿ ಸಮಾಜಕ್ಕೆ ಮೀಸಲಿಟ್ಟ ಹಣವನ್ನು ಸರ್ಕಾರ ಲೂಟಿ ಮಾಡಿದೆ. ಹಗರಣವನ್ನು ಲಘುವಾಗಿ ಪರಿಗಣಿಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಿದ್ದೇವೆ. ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ್ದೇವೆ. ಸರ್ಕಾರ ಹಣ ಲೂಟಿ ಮಾಡಿರುವ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಶರಣ ಪ್ರಕಾಶ್ ಪಾಟೀಲ್, ಬೋರ್ಡ್ ಅಧ್ಯಕ್ಷರು ಸೇರಿ ಮುಖ್ಯಮಂತ್ರಿಗಳು ಸಹ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.