ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ.ಈ ನಡುವೆ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ ಅವರು, ಜನರಿಗೆ ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಪ್ರತಿ 15 ದಿನಗಳಿಗೊಮ್ಮೆ ನೀರಿನ ಮೂಲಗಳಲ್ಲಿ ಕಡ್ಡಾಯವಾಗಿ ಗುಣಮಟ್ಟ ಪರೀಕ್ಷೆ ನಡೆಸಬೇಕು ಎಂದು ಸೂಚನೆ ನೀಡಿದ್ದಾರೆ.
ಕಲುಷಿತ ನೀರಿನಿಂದ ಯಾವುದೇ ತೊಂದರೆ ಉಂಟಾದರೆ ಸಂಬಂಧಪಟ್ಟ ಅಧಿಕಾರಿಯನ್ನು ನೇರ ಜವಾಬ್ದಾರಿ ಮಾಡಲಾಗುವುದು. ತುಕ್ಕು ಹಿಡಿದ ಹಳೆಯ ಪೈಪ್ ಬದಲಾವಣೆ ಮಾಡಬೇಕು. ಪ್ರತಿ 15 ದಿನಗಳಿಗೊಮ್ಮೆ ನೀರಿನ ಮೂಲದಲ್ಲಿ ಹಾಗೂ ವಿತರಣಾ ಬಿಂದುವಿನಲ್ಲಿನ ನೀರಿನ ಗುಣಮಟ್ಟವನ್ನು ಪ್ರಯೋಗಾಲಯದಲ್ಲಿ ಕಡ್ಡಾಯವಾಗಿ ಪರೀಕ್ಷೆ ಮಾಡಬೇಕು. ನೀರಿನ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾದ ಕಡೆಗಳಲ್ಲಿ ಹೊಸ ಮೂಲದಿಂದ ನೀರು ಪೂರೈಕೆ ಮಾಡಬೇಕು ಎಂದು ತಿಳಿಸಿದ್ದಾರೆ.
ಎಲ್ಲಾ ಜಿಲ್ಲೆಗಳಲ್ಲಿ ಆದಷ್ಟು ಬೇಗನೆ ಘನ ತ್ಯಾಜ್ಯ ವಿಲೇವಾರಿ ಘಟಕಗಳನ್ನು ಆರಂಭಿಸಬೇಕು. ಇನ್ನೂ 55 ಕಡೆಗಳಲ್ಲಿ ಘನತ್ಯಾಜ್ಯ ಘಟಕಗಳ ನಿರ್ಮಾಣ ಪ್ರಕ್ರಿಯೆ ನಡೆಯುತ್ತಿದ್ದು, ಆದಷ್ಟು ಬೇಗನೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಬೇಕು. ತ್ಯಾಜ್ಯ ನೀರು ಶುದ್ಧೀಕರಣ ಘಟಕ ಕಾರ್ಯಾರಂಭಿಸುವ ಮೂಲಕ ಕೊಳಚೆ ನೀರು ನೇರವಾಗಿ ಕೆರೆಗಳಿಗೆ ಸೇರುವುದನ್ನು ತಪ್ಪಿಸಬೇಕು. ಮೈಸೂರಿನ ದಳವಾಯಿ ಕೆರೆಗೆ ಕೊಳಚೆ ನೀರು ಸೇರುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಹೇಳಿದ್ದಾರೆ.