ಹೊಸದಿಗಂತ ವರದಿ, ಕುಶಾಲನಗರ
ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದಲ್ಲಿ ಹಿರಿಯ ಪತ್ರಕರ್ತರಿಗೆ ಪುಲಿಯಂಡ ರಾಮ್ ದೇವಯ್ಯ ಅವರು ಜ್ಞಾನಗಂಗಾ ಶಾಲೆಯ ಹೆಸರಿನಲ್ಲಿ ಸ್ಥಾಪಿಸಿರುವ ವಾರ್ಷಿಕ ದತ್ತಿ ಪ್ರಶಸ್ತಿಗೆ ‘ಹೊಸದಿಗಂತ’ ಪತ್ರಿಕೆಯ ಜಿಲ್ಲಾ ವರದಿಗಾರ ಕೆ. ತಿಮ್ಮಪ್ಪ ಭಾಜನರಾಗಿದ್ದಾರೆ.
ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಿಂದ ಕೊಡಗು ವಿಶ್ವವಿದ್ಯಾಲಯದ ಆಶ್ರಯದಲ್ಲಿ ಜು.9 ಮಂಗಳವಾರ ಮಧ್ಯಾಹ್ನ 1 ಗಂಟೆಗೆ ನಡೆಯುವ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಕೊಡಗು ವಿಶ್ವ ವಿದ್ಯಾಲಯದ ಕುಲಪತಿಗಳಾದ ಪ್ರೊ. ಅಶೋಕ್ ಸಂಗಪ್ಪ ಆಲೂರ ಉದ್ಘಾಟಿಸಲಿದ್ದಾರೆ. ಗೌರವ ಉಪಸ್ಥಿತಿಯನ್ನು ಕೊಡಗು ವಿಶ್ವ ವಿದ್ಯಾಲಯದ ರಿಜಿಸ್ಟ್ರಾರ್ (ಪರಿಕ್ಷಾಂಗ) ಡಾ. ಸೀನಪ್ಪ ವಹಿಸಲಿದ್ದಾರೆ. ಕೊಡಗು ಪತ್ರಕರ್ತರ ಸಂಘದ ಗೌರವ ಸಲಹೆಗಾರ ಹಾಗೂ ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ಮುಖ್ಯ ಭಾಷಣ ಮಾಡಲಿದ್ದಾರೆ. ಜೆ.ಎ.ಸಿ. ವಲಯಾಧ್ಯಕ್ಷ ಎಂ.ಡಿ. ರಂಗಸ್ವಾಮಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ. ಮುರುಳೀಧರ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಬಿ. ವಿನ್ಸೆಂಟ್ ತಿಳಿಸಿದ್ದಾರೆ.