ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿರಿಯ ಮುಖಂಡ, ಶತಾಯುಷಿ ಭೀಮಣ್ಣ ಖಂಡ್ರೆ ಅವರ ಆರೋಗ್ಯ ಸ್ಥಿರವಾಗಿದ್ದು, ಸಾರ್ವಜನಿಕರು ಯಾವುದೇ ರೀತಿಯ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು ಎಂದು ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ಮನವಿ ಮಾಡಿದ್ದಾರೆ.
ಕಳೆದ ಒಂದು ವಾರದಿಂದ ವಯೋಸಹಜ ಅಸ್ವಸ್ಥತೆ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಭೀಮಣ್ಣ ಖಂಡ್ರೆ ಅವರನ್ನು ಬೀದರ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಸ್ತುತ ಅವರು ಚೇತರಿಸಿಕೊಳ್ಳುತ್ತಿದ್ದು, ಮನೆಯಲ್ಲಿಯೇ ವೈದ್ಯಕೀಯ ತಂಡದ ನಿಗಾದಲ್ಲಿ ಚಿಕಿತ್ಸೆ ಮುಂದುವರಿದಿದೆ.
ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ತಂದೆಯವರ ಕುರಿತು ಹರಿದಾಡುತ್ತಿರುವ ತಪ್ಪು ಮಾಹಿತಿಗಳಿಗೆ ಸ್ಪಷ್ಟನೆ ನೀಡಿರುವ ಸಚಿವರು, “ತಂದೆಯವರ ಆರೋಗ್ಯ ಈಗ ಸ್ಥಿರವಾಗಿದೆ. ಕೆಟ್ಟ ಉದ್ದೇಶದ ವದಂತಿಗಳನ್ನು ಹಬ್ಬಿಸಬೇಡಿ. ಅವರ ಆರೋಗ್ಯ ಶೀಘ್ರವಾಗಿ ಸುಧಾರಿಸಲಿ ಎಂದು ಎಲ್ಲರೂ ಪ್ರಾರ್ಥಿಸಿ” ಎಂದು ಕೋರಿದ್ದಾರೆ.


