ಹೊಸದಿಗಂತ ಕಾರವಾರ:
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಜುಲೈ 18 ರ ವರಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಈ ಅವಧಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಸಮಸ್ಯೆಯಾಗದಂತೆ ಜಿಲ್ಲೆಯ ಸಾರ್ವಜನಿಕರ ರಕ್ಷಣೆಗಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 24*7 ಕಾರ್ಯ ನಿರ್ವಹಿಸುವ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ತೆರೆದಿರುವ ತುರ್ತು ಕಾರ್ಯಾಚರಣೆ ಕೇಂದ್ರದಲ್ಲಿ ಪೊಲೀಸ್, ಅಗ್ನಿಶಾಮಕ, ಹೆಸ್ಕಾಂ, ಅರಣ್ಯ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು, ಸಾರ್ವಜನಿಕರು ಮಳೆಯಿಂದಾಗಿ ಯಾವುದೇ ಅಪಾಯವಾದಲ್ಲಿ ಕೂಡಲೇ ಉಚಿತ ಸಹಾಯವಾಣಿ ಸಂಖ್ಯೆ 1077 ಗೆ ಅಥವಾ ಮೊ.ಸಂ. ಸಂಖ್ಯೆ. 9483511015 ಕರೆ, ವಾಟ್ಸಾಪ್ ಮೂಲಕ ಮಾಹಿತಿ ನೀಡಿದಲ್ಲಿ ತಕ್ಷಣ ನೆರವಿಗೆ ಧಾವಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಮಳೆಯಿಂದಾಗಿ, 2 ಮನೆಗಳು ಸಂಪೂರ್ಣ ನಾಶ, 2 ಮನೆಗಳಿಗೆ ತೀವ್ರ ಹಾನಿ ಮತ್ತು 18 ಮನೆಗಳಿಗೆ ಭಾಗಶ: ಹಾನಿಯಾಗಿದ್ದು, ಕಾರವಾರದಲ್ಲಿ 2, ಕುಮಟಾ ದಲ್ಲಿ 1 ಹಾಗೂ ಹೊನ್ನಾವರದಲ್ಲಿ 2 ಸೇರಿದಂತೆ ಒಟ್ಟು 5 ಕಾಳಜಿ ಕೇಂದ್ರಗಳನ್ನು ತೆರೆದಿದ್ದು ಒಟ್ಟು 93 ಜನರಿಗೆ ಆಶ್ರಯ ಒದಗಿಸಿ ಅಗತ್ಯ ಉಟೋಪಚಾರ ಮತ್ತು ವೈದ್ಯಕೀಯ ನೆರವು ಒದಗಿಸಲಾಗಿದೆ ಎಂದರು.
ತಗ್ಗು ಪ್ರದೇಶಗಳಲ್ಲಿ ಮತ್ತು ಗುಡ್ಡ ಕುಸಿಯಬಹುದಾದ ಅಪಾಯಕಾರಿ ಪ್ರದೇಶಗಳಲ್ಲಿ ವಾಸಿಸುತ್ತಿರುವ ಸಾರ್ವಜನಿಕರು , ಮುನ್ನೆಚ್ಚರಿಕೆ ಕ್ರಮವಾಗಿ ಸ್ವಯಂ ಪ್ರೇರಿತರಾಗಿ ಕಾಳಜಿ ಕೇಂದ್ರಗಳಿಗೆ ಬಂದು ಆಶ್ರಯ ಪಡೆಯುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.