ಹೊಸದಿಗಂತ ವರದಿ,ಹುಬ್ಬಳ್ಳಿ:
ಅಂಕೋಲಾ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಮೃತಪಟ್ಟವರನ್ನು ಹೊರ ತೆಗೆಯಲು ಕೇಂದ್ರ ಸರ್ಕಾರ ಎನ್‌ಡಿಆರ್‌ಎಫ್ ತಂಡವನ್ನು ನಿಯೋಜಿಸಿದ್ದು, ರಾಜ್ಯ ಸರ್ಕಾರ ಅಗತ್ಯ ಸಹಕಾರ ನೀಡುವಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ವರುಣ ಅಬ್ಬರಿಸುತ್ತಿದ್ದು, ರಣ ಮಳೆಯಿಂದಾಗಿ ಅವಘಡಗಳು ಸಂಭವಿಸಿ ಸಾವು-ನೋವು ಉಂಟಾಗುತ್ತಿದೆ. ಜನರು ಬಹು ಎಚ್ಚರಿಕೆಯಿಂದ ಇರಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.
ಉತ್ತರ ಕನ್ನಡದ ಅಂಕೋಲಾ ಸಮೀಪ ಶಿರೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಜನರು ಮೃತಪಟ್ಟಿರುವ ಬಗ್ಗೆ ಸಚಿವ ಜೋಶಿ ವಿಷಾದ ವ್ಯಕ್ತಪಡಿಸಿದ್ದಾರೆ.
ಈ ದುರ್ಘಟನೆಯಲ್ಲಿ ಬಲಿಯಾಗಿ ಕಾಣೆಯಾಗಿರುವ ಮೃತರ ದೇಹಗಳ ಶೋಧ ಕಾರ್ಯ ಮುಂದುವರೆದಿದೆ. ಈ ಕಾರ್ಯಕ್ಕೆ ಎನ್‌ಡಿಆರ್‌ಎಫ್ ತಂಡವನ್ನು ನಿಯೋಜಿಸಲಾಗಿದ್ದು, ಶೋಧ ಕಾರ್ಯ ಮುಂದುವರೆಸಲು ಈ ತಂಡಕ್ಕೆ ಬೇಕಾದ ಅಗತ್ಯ ಸಹಕಾರವನ್ನು ರಾಜ್ಯ ಸರ್ಕಾರ ಒದಗಿಸಬೇಕು ಎಂದು ಜೋಶಿ ಒತ್ತಾಯಿಸಿದ್ದಾರೆ.
ಈ ಪ್ರಕೃತಿ ವಿಕೋಪಕ್ಕೆ ಬಲಿಯಾದವರ ಕುಟುಂಬಗಳಿಗೆ ರಾಜ್ಯ ಸರ್ಕಾರ ಅಗತ್ಯ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಚಿವ ಪ್ರಹ್ಲಾದ ಜೋಶಿ ಟ್ವೀಟ್ ಮಾಡಿದ್ದಾರೆ.