ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಕನ್ನಡ ಜಿಲ್ಲೆಯ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಆದ ಭೂಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಕುಸಿತಕ್ಕೆ ಸಿಲುಕಿ ಸಾವನ್ನಪ್ಪಿದವರಿಗೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಗುಡ್ಡ ಕುಸಿತಕ್ಕೆ ಸಿಲುಕಿ ಇಬ್ಬರು ಮಕ್ಕಳು ಸೇರಿ ಸಾವನ್ನಪ್ಪಿರುವ ಧಾರುಣ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ ಎಂದಿದ್ದಾರೆ.
ಮೃತರೆಲ್ಲರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ನೋವುನ್ನು ಭರಿಸುವ ಶಕ್ತಿಯನ್ನು ಭಗವಂತ ಆ ಕುಟುಂಬಗಳಿಗೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಈಗಾಗಲೇ ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ಜತೆ ದೂರವಾಣಿಯಲ್ಲಿ ಮಾತನಾಡಿ, ಪರಿಹಾರ ಕಾರ್ಯ, ಮೃತರ ಕುಟುಂಬಗಳಿಗೆ ನೆರವು ಇತ್ಯಾದಿ ಕ್ರಮಗಳ ಬಗ್ಗೆ ಮಾಹಿತಿ ಇದೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇನ್ನೂ ಹಲವೆಡೆ ಭೂಕುಸಿತವಾಗುವ ಆತಂಕವಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ ಎಂದು ಹೇಳಿದರು.
ಇನ್ನು ಹೆದ್ದಾರಿ ಬದಿ ಸಣ್ಣಪುಟ್ಟ ಗೂಡಂಗಡಿ, ಹೊಟೇಲ್ ಇಟ್ಟುಕೊಂಡು ಬದುಕು ಕಟ್ಟಿಕೊಂಡಿರುವ ಜನರಿಗೆ ಕುಮಾರಸ್ವಾಮಿ ಅವರು ಒಂದು ಮನವಿ ಸಲ್ಲಿಸಿದ್ದಾರೆ. ‘ಮಳೆಗಾಲ, ಇನ್ನಿತರೆ ಅಪಾಯಕಾರಿ ಸಂದರ್ಭಗಳಲ್ಲಿ ಭೂ ಕುಸಿತದ ಬಗ್ಗೆ ಬಹಳ ಎಚ್ಚರಿಕೆ ವಹಿಸಬೇಕು. ರಸ್ತೆಬದಿ, ಗುಡ್ಡಗಳ ಕೆಳಗೆ ವಾಸಿಸುವ, ಸಣ್ಣಪುಟ್ಟ ವ್ಯಾಪಾರ ಮಾಡಿಕೊಳ್ಳುವವರು ಆದಷ್ಟು ಮುನ್ನೆಚ್ಚರಿಕೆ ವಹಿಸಬೇಕು ಎಂಬುದು ನನ್ನ ಮನವಿ ಎಂದಿದ್ದಾರೆ.