ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿ ಸೇರಿದಂತೆ ಮಲೆನಾಡು ಭಾಗಗಳಲ್ಲಿ ವರುಣ ಅಬ್ಬರಿಸುತ್ತಿದ್ದು, ಮುಂದಿನ ಎರಡು-ಮೂರು ದಿನ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬಳಿಕ ಮಳೆ ಪ್ರಮಾಣ ತಗ್ಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಕರ್ನಾಟಕ ಮತ್ತು ಪಕ್ಕದ ಪಶ್ಚಿಮ ಘಟ್ಟಗಳ ಜಿಲ್ಲೆಗಳಲ್ಲಿ ಬಲವಾದ ಗಾಳಿಯ ಪರಿಣಾಮ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಮತ್ತು ನಿರಂತರ ಗಾಳಿಯ ವೇಗವು 40-50 ಕಿ.ಮೀ ತಲುಪುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತವರಣ ಮುಂದುವರಿಯಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.