ಹೊಸ ದಿಗಂತ ಡಿಜಿಟಲ್ ಡೆಸ್ಕ್:
ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ನೀಟ್ ಪರೀಕ್ಷೆ ಅಕ್ರಮದ ಕುರಿತು ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸಂಸತ್ ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದಾರೆ.
ಕಲಾಪ ಆರಂಭವಾಗುತ್ತಲೇ ರಾಹುಲ್ ಗಾಂಧಿ ಅವರು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಪ್ರಸ್ತಾಪಿಸಿದರು. ಅಖಿಲೇಶ್ ಯಾದವ್ ಅವರು ಕೂಡ, ಕೇಂದ್ರ ಸರ್ಕಾರವು ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿದೆ ಎಂದು ಕುಟುಕಿದರು. ಇದಕ್ಕೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಪ್ರತ್ಯುತ್ತರ ನೀಡಿದರು.
ರಾಹುಲ್ ಗಾಂಧಿ ಹೇಳಿದ್ದೇನು?
ದೇಶಾದ್ಯಂತ ಪರೀಕ್ಷಾ ವ್ಯವಸ್ಥೆಯಲ್ಲಿ ಭಾರಿ ಗಂಭೀರ ಸಮಸ್ಯೆ ಇದೆ ಎಂಬುದು ದೃಢವಾಗಿದೆ. ಇದು ನೀಟ್ ಮಾತ್ರವಲ್ಲ, ಎಲ್ಲ ಪ್ರಮುಖ ಪರೀಕ್ಷೆಗಳ ವ್ಯವಸ್ಥೆಯಲ್ಲೂ ಲೋಪದೋಷವಿದೆ. ಆದರೆ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮೊಬ್ಬರನ್ನು ಬಿಟ್ಟು ಎಲ್ಲರ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಲ್ಲಿ ಏನು ನಡೆಯುತ್ತಿದೆ, ಯಾವ ಮೂಲಭೂತ ಸಮಸ್ಯೆಯು ವಿದ್ಯಾರ್ಥಿಗಳನ್ನು ಕಾಡುತ್ತಿದೆ ಎಂಬುದೇ ಧರ್ಮೇಂದ್ರ ಪ್ರಧಾನ್ ಅವರಿಗೆ ಅರ್ಥವಾಗಿದೆಯೋ, ಇಲ್ಲವೋ ಗೊತ್ತಿಲ್ಲ. ಆದರೆ, ದೇಶದ ಲಕ್ಷಾಂತರ ಮಕ್ಕಳ ಭವಿಷ್ಯಕ್ಕೆ ಇದರಿಂದ ತೊಂದರೆಯಾಗುತ್ತಿದೆ ಎಂದು ಹೇಳಿದರು.
ಧರ್ಮೇಂದ್ರ ಪ್ರಧಾನ್ ಪ್ರತ್ಯುತ್ತರ
ರಾಹುಲ್ ಗಾಂಧಿ ಆರೋಪಗಳಿಗೆ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಪ್ರತ್ಯುತ್ತರ ನೀಡಿದರು. ‘ಒಂದು ಸುಳ್ಳನ್ನು ಪದೇಪದೆ ಹೇಳಿದರೆ ಅದು ಸತ್ಯವಾಗುವುದಿಲ್ಲ. ಕಳೆದ 7 ವರ್ಷಗಳಲ್ಲಿ ಯಾವುದೇ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದಕ್ಕೆ ಸಾಕ್ಷ್ಯಗಳೇ ಇಲ್ಲ. ನೀಟ್ ಪ್ರಕರಣವು ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ. ಸುಮಾರು 240ಕ್ಕೂ ಹೆಚ್ಚಿನ ಪರೀಕ್ಷೆಗಳನ್ನು ಜವಾಬ್ದಾರಿಯಿಂದ ನಡೆಸಲಾಗಿದೆ ಎಂಬುದಾಗಿ ನಾನು ಸ್ಪಷ್ಟಪಡಿಸುತ್ತೇನೆ’ ಎಂದು ಹೇಳಿದರು.