ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET) ಅಕ್ರಮ ನಡೆದಿರುವ ಪ್ರಕರಣವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಇದರ ಮಧ್ಯೆಯೇ, ನೀಟ್ ವಿರುದ್ಧ ಹಲವು ರಾಜ್ಯ ಸರ್ಕಾರಗಳು ನಿರ್ಣಯ ಮಂಡಿಸುತ್ತಿವೆ.
ಕರ್ನಾಟಕದಲ್ಲಿ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಿದ ಬೆನ್ನಲ್ಲೇ, ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಟಿಎಂಸಿ ಸರ್ಕಾರವು ನೀಟ್ ವಿರುದ್ಧ ನಿರ್ಣಯ ಮಂಡಿಸಿದೆ.
‘ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನೀಟ್ ಪರೀಕ್ಷೆಯನ್ನು ಆಯೋಜಿಸುವಲ್ಲಿ ವಿಫಲವಾಗಿದೆ. ಇದರಿಂದಾಗಿ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಪ್ರಕರಣಗಳು ಉಂಟಾಗಿವೆ. ಇಂತಹ ಪ್ರಕರಣಗಳು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ. ಹಾಗಾಗಿ, ರಾಜ್ಯದಲ್ಲಿ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ, ಹೊಸ ಮಾದರಿಯ ಪರೀಕ್ಷೆಯನ್ನು ನಡೆಸಲಾಗುತ್ತದೆ’ ಎಂಬುದಾಗಿ ಟಿಎಂಸಿ ಸರ್ಕಾರ ಮಂಡಿಸಿದ ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.
ಈ ಮೊದಲು ತಮಿಳುನಾಡು ವಿಧಾನಸಭೆಯಲ್ಲಿ ನೀಟ್ ವಿರುದ್ಧ ನಿರ್ಣಯ ಮಂಡಿಸಲಾಗಿದೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಕೇಂದ್ರ ಸರ್ಕಾರ ಹಾಗೂ ಎನ್ಟಿಎ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಆದರೆ, 23 ಲಕ್ಷ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಹಾಗೂ ಅಕ್ರಮದ ತೀವ್ರತೆಯನ್ನು ಪರಿಶೀಲಿಸಿದ ನ್ಯಾಯಾಲಯವು, ನೀಟ್ ಮರುಪರೀಕ್ಷೆ ಬೇಡ ಎಂದು ಮಹತ್ವದ ಆದೇಶ ಹೊರಡಿಸಿದೆ.