ಕಾಸರಗೋಡು:
ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆಯೊಂದಿಗೆ ಬಿರುಗಾಳಿಯೂ ಬೀಸುತ್ತಿದ್ದು, ಹಲವೆಡೆಗಳಲ್ಲಿ ನಾಶ ನಷ್ಟ ಸಂಭವಿಸುತ್ತಿರುವ ಬಗ್ಗೆ ವರದಿಯಾಗುತ್ತಿದೆ. ಜಿಲ್ಲೆಯ ಪ್ರಮುಖ ನದಿಗಳಲ್ಲಿ ನೀರಿನ ಮಟ್ಟ ಅಪಾಯಕಾರಿ ಹಂತ ತಲುಪಿದೆ. ಪಯಸ್ವಿನಿ, ಚಂದ್ರಗಿರಿ, ಶಿರಿಯ, ಉಪ್ಪಳ ನದಿಗಳು ತುಂಬಿ ಹರಿಯುತ್ತಿವೆ. ಬಿರುಸಿನ ಮಳೆಗೆ ಜಿಲ್ಲೆಯ ಬಹುತೇಕ ರಸ್ತೆಗಳಲ್ಲೂ ನೀರು ಹರಿಯುತ್ತಿದ್ದು, ಕಾಸರಗೋಡು ನಗರದಲ್ಲಿ ಸಾರಿಗೆ ಸಂಚಾರ ಅಸ್ತವ್ಯಸ್ತಗೊಂಡಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ದಟ್ಟಣೆಯಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಮಲೆನಾಡು ಹೆದ್ದಾರಿಯ ಮುಳ್ಳೇರಿಯ, ಆದೂರು ಸಹಿತ ವಿವಿಧೆಡೆ ಭೂಕುಸಿತ ಸಂಭವಿಸುವ ಎಚ್ಚರಿಕೆ ನೀಡಲಾಗಿದೆ.
ಮುಂದಿನ 5 ದಿನಗಳ ಕಾಲ ಗುಡುಗು ಮಿಂಚು ಸಹಿತ ಭಾರೀ ಮಳೆ ಸಾಧ್ಯತೆ
ಮುಂದಿನ ಐದು ದಿನಗಳ ಕಾಲ ಕಾಸರಗೋಡು ಜಿಲ್ಲೆಯೂ ಸೇರಿದಂತೆ ಕೇರಳದಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿರುವನಂತಪುರದ ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ.
ಸೋಮವಾರ ರಾತ್ರಿಯಿಂದ ಮತ್ತೆ ಆರಂಭಗೊಂಡ ಬಿರುಸಿನ ಮಳೆಯು 5 ದಿನಗಳ ವರೆಗೆ ಮುಂದುವರಿಯುವ ಸಾಧ್ಯತೆಯಿದೆ. ರಾಜ್ಯದಲ್ಲಿ ಮಲಪ್ಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇಡುಕ್ಕಿ, ಎರ್ನಾಕುಳಂ, ತೃಶೂರು, ಮಲಪ್ಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಚಂಡಮಾರುತದ ಅಬ್ಬರವು ಕರಾವಳಿ ಪ್ರದೇಶಗಳಲ್ಲಿ ಪ್ರಬಲವಾಗಿರುವ ಸಾಧ್ಯತೆಯಿರುವುದರಿಂದ ಅಪಾಯದ ವಲಯಗಳಲ್ಲಿ ವಾಸಿಸುವ ಜನರು ಜಾಗರೂಕರಾಗಿರಬೇಕು. ಉತ್ತರ ಕೇರಳ ಮತ್ತು ಲಕ್ಷದ್ವೀಪ ಕರಾವಳಿಗಳಲ್ಲಿ ಮೀನುಗಾರಿಕೆ ನಡೆಸಬಾರದು ಎಂದು ಕೇಂದ್ರ ಹವಾಮಾನ ಇಲಾಖೆಯು ತಿಳಿಸಿದೆ.