ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರಾವಣ ಮಾಸ ಬಂತೆಂದರೆ ಹಬ್ಬಗಳ ಮಾಸವಾಗಿದೆ. ಪ್ರತಿಯೊಂದು ಹಬ್ಬದಲ್ಲಿ ಮನೆಯಲ್ಲಿ ಸಡಗರ ಸಂಭ್ರಮದಿಂದ ಕೂಡಿರುತ್ತದೆ. ಅದರಲ್ಲೂ ಶ್ರಾವಣ ಮಾಸದಲ್ಲಿ ಎರಡನೇ ಶುಕ್ರವಾರ ಬರುವ ಈ ವರಲಕ್ಷ್ಮಿ ವ್ರತವನ್ನು ಎಲ್ಲಾ ಮುತ್ತೈದೆಯರು ಭಕ್ತಿ ಶ್ರದ್ಧೆಯಿಂದ ಆಚರಿಸುತ್ತಾರೆ.
ಹಬ್ಬದ ತಯಾರಿ ಹೇಗೆ ಮಾಡೋದು?
ಈ ಬಾರಿ ಆಗಸ್ಟ್ 16ರಂದು ವರಮಹಾಲಕ್ಷ್ಮಿ ಹಬ್ಬ ಆಚರಿಸಲಾಗುತ್ತದೆ. ಹಬ್ಬಕ್ಕೆ ಇನ್ನೂ ಸಮಯವಿರುವ ಕಾರಣ ಈಗಲೇ ಹೊಸ ಸೀರೆಯನ್ನು ಖರೀದಿ ಮಾಡಿ. ಬಾರ್ಡರ್ ಇರುವ ಹಸಿರು ಸೀರೆಗಳು ಸೂಕ್ತ. ಇನ್ನು ಹಬ್ಬಕ್ಕೆ ಒಂದೆರಡು ದಿನಗಳಷ್ಟೇ ಬಾಕಿ ಇದೆ ಎನ್ನುವಾಗ ಹೂವು ಹಣ್ಣಿನ ದರ ಹೆಚ್ಚಾಗುತ್ತದೆ. ಆದಷ್ಟು ಮುನ್ನವೇ ತಂದು ಶೇಖರಣೆ ಮಾಡಿ.
ಇನ್ನು ದೇವರಿಗೆ ಅಲಂಕಾರ, ಸೀರೆ ಉಡಿಸುವ ರೀತಿಯನ್ನು ಯುಟ್ಯೂಬ್‌ನಲ್ಲಿ ವೀಕ್ಷಿಸಿ ರೆಡಿ ಮಾಡಿಕೊಳ್ಳಿ. ಹಬ್ಬದ ದಿನ ಬೆಳಗ್ಗೆ ಬೇಗನೆ ಎದ್ದು ಸ್ನಾನ ಮುಗಿಸಿ, ದೇವರಿಗೆ ಅಲಂಕಾರ ಆರಂಭಿಸಿ. ಅಡುಗೆ ಮಾಡಿ ಪೂಜೆ ಮಾಡಿ ಮುತ್ತೈದೆಯರಿಗೆ ಅರಿಶಿಣ ಕುಂಕುಮ ನೀಡಬೇಕು.
ಪುರಾಣದಲ್ಲಿ ಏನಿದೆ?
ಪುರಾಣದಲ್ಲಿ ಚಾರುಮತಿ ಎಂಬ ಸ್ತ್ರೀಯೊಬ್ಬಳು ನಿಸ್ವಾರ್ಥವಾಗಿ ತನ್ನ ಅತ್ತೆ-ಮಾವಂದಿರ ಸೇವೆ ಮಾಡುತ್ತಿರುತ್ತಾಳೆ. ಇದನ್ನು ಕಂಡು ಆಕೆಯ ಶ್ರದ್ಧೆಗೆ ಒಲಿದ ಲಕ್ಷ್ಮಿ ಶ್ರಾವಣ ಮಾಸದ ಹುಣ್ಣಿಮೆಗೂ ಮೊದಲ ಶುಕ್ರವಾರ ನನ್ನನ್ನು ಆರಾಧಿಸು, ನಿನ್ನ ಇಷ್ಟಾರ್ಥಗಳನ್ನು ಪೂರೈಸುತ್ತೇನೆ ಎನ್ನುತ್ತಾಳೆ. ಆ ಕಾರಣ ಚಾರುಮತಿ ಶ್ರಾವಣ ಮಾಸದ ಹುಣ್ಣಿಮೆಗೂ ಮೊದಲ ಶುಕ್ರವಾರ ವರಮಹಾಲಕ್ಷ್ಮಿಯನ್ನು ಆರಾಧಿಸಿ ತನ್ನ ಇಷ್ಟಾರ್ಥಗಳನ್ನು ಪೂರೈಸಿಕೊಳ್ಳುತ್ತಾಳೆ.
ಲಕ್ಷ್ಮಿಯು ಕ್ಷೀರ ಸಾಗರದಿಂದ ಅವತಾರ ತಾಳಿದ್ದಾಳೆ ಎನ್ನುವ ಕಥೆಯಿದೆ. ರಾಕ್ಷಸರು ಹಾಗೂ ದೇವತೆಗಳು ಅಮೃತ ಪಡೆಯುವುದಕ್ಕಾಗಿ ವಾಸುಕಿಯ ಸಹಾಯದೊಂದಿಗೆ ಮಂದಾರ ಪರ್ವತವನ್ನು ಕಡೆಯುತ್ತಿರುವಾಗ ಕ್ಷೀರಸಾಗರದಲ್ಲಿ ಪರಿಶುದ್ಧವಾಗಿ ಶ್ವೇತವರ್ಣದಲ್ಲಿ ಲಕ್ಷ್ಮೀ ಉದ್ಭವಿಸುತ್ತಾಳೆ. ಆದ್ದರಿಂದಲೇ ಇಷ್ಟಾರ್ಥಗಳನ್ನು ಪೂರೈಸುವ ಲಕ್ಷ್ಮಿಯ ಆರಾಧನೆಗಾಗಿ ಈ ಹಬ್ಬವಾಗಿದೆ. ಪ್ರತಿವರ್ಷವೂ ಲಕ್ಷ್ಮಿಯನ್ನು ಶ್ರದ್ಧೆ-ಭಕ್ತಿಯಿಂದ ಆರಾಧಿಸುವುದರಿಂದ ಸಕಲ ಇಷ್ಟಾರ್ಥವೂ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ.