ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ನ್ಯೂಜೆರ್ಸಿ ರಾಜ್ಯದಲ್ಲಿ ನಡೆದ ಭೀಕರ ಘಟನೆಯೊಂದು ಭಾರತೀಯ ಸಮುದಾಯವನ್ನು ಬೆಚ್ಚಿಬೀಳಿಸಿದೆ. ಭಾರತೀಯ ಮೂಲದ ಮಹಿಳೆಯೊಬ್ಬರು ತಮ್ಮ ಇಬ್ಬರು ಅಪ್ರಾಪ್ತ ಮಕ್ಕಳನ್ನು ಹತ್ಯೆ ಮಾಡಿದ್ದಾರೆಯೆಂಬ ಆರೋಪದ ಮೇಲೆ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ನ್ಯೂಜೆರ್ಸಿಯ ಹಿಲ್ಸ್‌ಬರೋ ಪ್ರದೇಶದಲ್ಲಿ ವಾಸವಾಗಿದ್ದ ಪ್ರಿಯತರ್ಸಿನಿ ನಟರಾಜನ್ (35) ಎಂಬ ಮಹಿಳೆಯೇ ಆರೋಪಿಯಾಗಿದ್ದಾರೆ.
ಜನವರಿ 13ರ ಸಂಜೆ ಸುಮಾರು 6.45ರ ವೇಳೆಗೆ, ಮಕ್ಕಳ ತಂದೆ ಕೆಲಸ ಮುಗಿಸಿ ಮನೆಗೆ ಬಂದಾಗ 5 ಮತ್ತು 7 ವರ್ಷದ ಇಬ್ಬರು ಗಂಡು ಮಕ್ಕಳು ಮನೆಯೊಳಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡಿದ್ದಾರೆ. ತಕ್ಷಣವೇ ಆತಂಕಗೊಂಡ ತಂದೆ 911ಗೆ ಕರೆ ಮಾಡಿ ವಿಷಯ ತಿಳಿಸಿದ್ದರು.
ಸ್ಥಳಕ್ಕೆ ಧಾವಿಸಿದ ಪೊಲೀಸರು ಮಕ್ಕಳನ್ನು ಪರಿಶೀಲಿಸಿದಾಗ, ಅವರು ಮೃತಪಟ್ಟಿರುವುದು ದೃಢಪಟ್ಟಿದೆ. ಪ್ರಾಥಮಿಕ ತನಿಖೆಯ ಬಳಿಕ, ಮಕ್ಕಳ ತಾಯಿ ಪ್ರಿಯತರ್ಸಿನಿ ನಟರಾಜನ್ ಅವರನ್ನು ಪೊಲೀಸರು ವಶಕ್ಕೆ ಪಡೆದು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ಪ್ರಕರಣದ ತನಿಖೆಯ ವೇಳೆ, ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದ ಮೇಲೆ ಮಕ್ಕಳ ತಂದೆಯನ್ನೂ ಪೊಲೀಸರು ಬಂಧಿಸಿದ್ದಾರೆ.


