ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಕಾರಣದಲ್ಲಿ ದೀರ್ಘಕಾಲದಿಂದ ಚರ್ಚೆಯಲ್ಲಿರುವ ‘ದಲಿತ ಮುಖ್ಯಮಂತ್ರಿ’ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಚ್. ಮುನಿಯಪ್ಪ ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಕುರಿತು ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ದಲಿತ ಮುಖ್ಯಮಂತ್ರಿ ಎಂಬುದು ಮಲ್ಲಿಕಾರ್ಜುನ ಖರ್ಗೆ ಅವರ ಕಾಲದಿಂದಲೂ ಇರುವ ಹಳೆಯ ಆಕಾಂಕ್ಷೆ. ಈ ಹಿಂದೆ ಖರ್ಗೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ 80 ಸ್ಥಾನಗಳನ್ನು ಗೆದ್ದಿದ್ದರೂ, ಅವರಿಗೆ ಮುಖ್ಯಮಂತ್ರಿಯಾಗುವ ಅವಕಾಶ ಸಿಗಲಿಲ್ಲ ಎಂಬ ನೋವು ಸಮುದಾಯದಲ್ಲಿದೆ ಎಂದು ಮುನಿಯಪ್ಪ ಸ್ಮರಿಸಿದರು.
“ರಾಜ್ಯದ ಶೇ. 25ರಷ್ಟು ದಲಿತ ಸಮುದಾಯವು ಕಾಂಗ್ರೆಸ್‌ಗೆ ಶೇ. 75ರಷ್ಟು ಮತಗಳನ್ನು ನೀಡುತ್ತಾ ಬಂದಿದೆ. ಇಷ್ಟೊಂದು ದೊಡ್ಡ ಪ್ರಮಾಣದ ಬೆಂಬಲ ನೀಡಿದರೂ ಸಮುದಾಯಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಸಿಗುತ್ತಿಲ್ಲ ಎಂಬ ಅಂಶವನ್ನು ಈಗಾಗಲೇ ಹೈಕಮಾಂಡ್ ಗಮನಕ್ಕೆ ತರಲಾಗಿದೆ” ಎಂದು ಅವರು ತಿಳಿಸಿದರು.
ಪಕ್ಷದ ಹೈಕಮಾಂಡ್ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರವನ್ನು ವರಿಷ್ಠರು ತೆಗೆದುಕೊಳ್ಳಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಮುನಿಯಪ್ಪ, ತಾವೆಲ್ಲರೂ ಪಕ್ಷದ ಶಿಸ್ತಿನ ಸಿಪಾಯಿಗಳಾಗಿ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ಹೇಳಿದರು.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಅವರು, ಈ ಯೋಜನೆಗಳು ಜನರ ಮನ ಗೆದ್ದಿವೆ. ಇವುಗಳ ಬಲದಿಂದಲೇ 2028ರ ಮುಂದಿನ ಚುನಾವಣೆಯಲ್ಲೂ ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.


