ಹೊಸದಿಗಂತ ವರದಿ ಕಲಬುರಗಿ:
ಜಿಲ್ಲೆಯ ಜೇವರ್ಗಿ ತಾಲೂಕಿನ ಮದರಿ ಗ್ರಾಮದ ಬಳಿ ಚಲಿಸುತ್ತಿದ್ದ ಸಾರಿಗೆ ಬಸ್‌ನ ಇಂಜಿನ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯಪ್ರಜ್ಞೆಯಿಂದಾಗಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಜೇವರ್ಗಿ ಡಿಪೋಗೆ ಸೇರಿದ ಈ ಬಸ್ ಮದರಿ ಗ್ರಾಮದಿಂದ ಜೇವರ್ಗಿ ಪಟ್ಟಣಕ್ಕೆ ತೆರಳುತ್ತಿತ್ತು. ಬಸ್ ಚಲಿಸುತ್ತಿದ್ದಾಗಲೇ ಇಂಜಿನ್ ಭಾಗದಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತ ಚಾಲಕ ಬಸ್ ನಿಲ್ಲಿಸಿ, ಎಲ್ಲ ಪ್ರಯಾಣಿಕರನ್ನು ಶೀಘ್ರವಾಗಿ ಕೆಳಗಿಳಿಸಿದ್ದಾರೆ. ಇದರಿಂದಾಗಿ ಒಳಗಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಬಸ್‌ನಿಂದ ದಟ್ಟವಾದ ಹೊಗೆ ಆವರಿಸಿದ್ದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯರು ನೀರು ಸುರಿದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಈ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಜೇವರ್ಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


