ಹೊಸದಿಗಂತ ತುಮಕೂರು:
ರಾಜ್ಯಪಾಲರಿಗೆ ಬೆದರಿಕೆ ಇದೆ ಎಂಬುದರ ಕುರಿತು ನನಗಾಗಲಿ ಅಥವಾ ಡಿಜಿ ಅವರ ಗಮನಕ್ಕಾಗಲಿ ಬಂದಿಲ್ಲ. ರಾಜ್ಯಪಾಲರಿಗೆ ಬುಲೆಟ್ ಪ್ರೂಫ್ ಕಾರು ಕೊಟ್ಟಿರುವ ಬಗ್ಗೆ ಹೆಚ್ಚಿನ ಮಾಹಿತಿ ಗೊತ್ತಿಲ್ಲ. ಕೇಂದ್ರದ ಭದ್ರತಾ ವ್ಯವಸ್ಥೆ ಪ್ರಕಾರ ನೀಡಿರಬಹುದು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಕಾನೂನಿಗಿಂತ ಯಾರು ದೊಡ್ಡವರಿಲ್ಲ. ಕಾನೂನಿಗೆ ಗೌರವ ಕೊಡುತ್ತಿರುವುದರಿಂದಲೇ ಇನ್ನು ನಾವೆಲ್ಲ ಇದ್ದೇವೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಕಾನೂನಿಗೆ ಗೌರವ ನೀಡಬೇಕು ಎಂದು ಹೇಳಿದರು.
ಜಂತ್‌ಕಲ್ ಮೈನಿಂಗ್ ವಿಚಾರದಲ್ಲಿ ಸಹಿ ಫೋರ್ಜರಿಯಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಹಿ ಫೋರ್ಜರಿಯಾಗಿದೆ ಎಂಬುದರ ಕುರಿತು ಕುಮಾರಸ್ವಾಮಿ ಅವರು ದೂರು ಕೊಟ್ಟರೆ ಪರಿಶೀಲಿಸಿ, ಕ್ರಮ ಕೈಗೊಳ್ಳುತ್ತೇವೆ. ದ್ವೇಷದ ರಾಜಕಾರಣ ಮಾಡುವುದಿಲ್ಲ. ಕಾನೂನು ಮೀರಿ ಏನನ್ನು ಮಾಡಿಲ್ಲ. ಬಿಜೆಪಿಯವರು ರಾಜ್ಯಪಾಲರ ಕಚೇರಿಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.
ನಾವು ಗ್ಯಾರಂಟಿ ಕೊಡುವುದು ಬೇರೆ ವಿಚಾರ. ಈ ಬಗ್ಗೆ ಸತತವಾಗಿ ಅಪಪ್ರಚಾರ ಮಾಡಲಾಗುತ್ತಿದೆ. ಕಳೆದ ಬಾರಿಗಿಂತ ಹೆಚ್ಚು ಬಜೆಟ್ ಮಂಡಿಸಲಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಖರ್ಚು ಮಾಡಿದರು ಸಹ, ಸರ್ಕಾರದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಹಣವಿದೆ ಎಂದು ಹೇಳಿದರು
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರೂ. 5300 ಕೋಟಿ ಭದ್ರಾ ಮೇಲ್ದಂಡೆ ಯೋಜನೆಗೆ ನೀಡಲಾಗುವುದು ಎಂದು ಹೇಳಿದ್ದರು. ಈಗ ವಾಪಸ್ ಪಡೆದುಕೊಂಡಿದ್ದಾರೆ. ಇದು ಮಲತಾಯಿ ಧೋರಣೆ. ದೇಶದಲ್ಲಿ ಜಿಎಸ್‌ಟಿ ಕಟ್ಟುವುದರಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಕೇಂದ್ರ ಸರ್ಕಾರವು ರಾಜ್ಯಕ್ಕೆ ಅನುದಾನ ನೀಡುವುದರಲ್ಲಿ ಮಲತಾಯಿ ಧೋರಣೆ ನೀತಿ ಅನುಸರಿಸುತ್ತಿದೆ ಎಂದು ಕೇಂದ್ರದ ವಿರುದ್ಧ ಹರಿಹಾಯ್ದರು.