ಹೊಸದಿಗಂತ ಡಿಜಿಟಲ್ ಡೆಸ್ಕ್:
ಪತ್ನಿ ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬರು ಧಾರವಾಡದ ಕೇಂದ್ರ ಕಾರಾಗೃಹದ ಆವರಣದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಬಸಾಪುರ ಗ್ರಾಮದ ಈಶ್ವರಪ್ಪ ಪೂಜಾರ್ ಎಂದು ಗುರುತಿಸಲಾಗಿದೆ.
ಪತ್ನಿ ಕೊಲೆ ಪ್ರಕರಣದಲ್ಲಿ ಅವರಿಗೆ 14 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದ್ದು, ಈಗಾಗಲೇ ಸುಮಾರು ಏಳು ವರ್ಷಕ್ಕಿಂತ ಹೆಚ್ಚು ಕಾಲ ಶಿಕ್ಷೆ ಅನುಭವಿಸಿದ್ದರು. ಜೈಲು ಮೂಲಗಳ ಪ್ರಕಾರ, ಕೆಲಸ ಮುಗಿದ ಬಳಿಕ ಈಶ್ವರಪ್ಪ ತಮ್ಮ ಸೇಲ್‌ಗೆ ಮರಳಿಲ್ಲ. ಇದರಿಂದ ಅನುಮಾನಗೊಂಡ ಜೈಲು ಸಿಬ್ಬಂದಿ ಹುಡುಕಾಟ ನಡೆಸಿದಾಗ, ಜೈಲು ಆವರಣದಲ್ಲಿರುವ ನಿರ್ಮಾಣ ಹಂತದ ಕಟ್ಟಡದ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಕಟ್ಟಡ ಕಾಮಗಾರಿಗೆ ಬಳಸಲಾಗಿದ್ದ ಹಗ್ಗದಿಂದಲೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾದರೂ, ವೈದ್ಯರು ಮೃತರೆಂದು ಘೋಷಿಸಿದ್ದಾರೆ. ಈ ಸಂಬಂಧ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.


