ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬರುವ ಗ್ರೇಟರ್ ಬೆಂಗಳೂರು ಚುನಾವಣೆಗಳನ್ನು ದೃಷ್ಟಿಯಲ್ಲಿ ಇಟ್ಟುಕೊಂಡು, ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ರೀತಿಯ ಧಕ್ಕೆ ಆಗದಂತೆ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಸಂಯಮದಿಂದ ಕೆಲಸ ಮಾಡಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟ ಸೂಚನೆ ನೀಡಿದ್ದಾರೆ.
ನಗರದ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಮುಖಂಡರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ಥಳೀಯ ಮಟ್ಟದಲ್ಲಿ ಏನೇ ಸಮಸ್ಯೆಗಳು ಅಥವಾ ಗೊಂದಲಗಳಿದ್ದರೂ ಅವುಗಳನ್ನು ಬಹಿರಂಗವಾಗಿ ಹೇಳಿಕೆಗಳ ಮೂಲಕ ಹೊರಹಾಕಬಾರದು ಎಂದು ತಾಕೀತು ಮಾಡಿದರು. ಅಂತಹ ವಿಚಾರಗಳನ್ನು ನೇರವಾಗಿ ಪಕ್ಷದ ಗಮನಕ್ಕೆ ತರಬೇಕು. ಮಾಧ್ಯಮಗಳು ಅಥವಾ ಬೀದಿಗಳಲ್ಲಿ ಮಾತನಾಡುವುದು ಮೈತ್ರಿಗೆ ಹಾನಿಕಾರಕವಾಗಬಹುದು ಎಂದು ಎಚ್ಚರಿಸಿದರು.
ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಸಾಧಿಸಿದ ಯಶಸ್ಸು ಬೆಂಗಳೂರಲ್ಲಿಯೂ ಮರುಕಳಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಕುಮಾರಸ್ವಾಮಿ, ಈ ಬಾರಿ ಹೆಚ್ಚಿನ ವಾರ್ಡುಗಳಲ್ಲಿ ಗೆಲುವು ಸಾಧಿಸಲು ಬಿಜೆಪಿ–ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ದುಡಿಯಬೇಕು ಎಂದು ಕರೆ ನೀಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ತೆರಿಗೆ ಭಾರ, ಬೆಲೆ ಏರಿಕೆ ಮತ್ತು ಭ್ರಷ್ಟಾಚಾರದಿಂದ ಜನರು ಬೇಸತ್ತಿದ್ದಾರೆ ಎಂದು ಹೇಳಿದರು. ಬೆಂಗಳೂರಿನ ಮೂಲಸೌಕರ್ಯ ಸಂಪೂರ್ಣ ಕುಸಿದಿದ್ದು, ಎಲ್ಲೆಡೆ ಗುಂಡಿಗಳೇ ಕಾಣಿಸುತ್ತಿವೆ ಎಂದು ಟೀಕಿಸಿದರು.


