ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದಲ್ಲಿ ಅಕ್ರಮ ವಲಸಿಗರ ಶೆಡ್‌ಗಳಿಗೆ ತೆರಳಿ ಪರಿಶೀಲನೆ ನಡೆಸುತ್ತಿದ್ದ ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಬೆಂಗಳೂರು ಪೊಲೀಸರು ಶುಕ್ರವಾರ ತಡರಾತ್ರಿ ವಶಕ್ಕೆ ಪಡೆದಿದ್ದಾರೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಬಂಧನ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಪುನೀತ್ ಕೆರೆಹಳ್ಳಿ ತಮ್ಮ ಸಹಚರರೊಂದಿಗೆ ನಗರದಲ್ಲಿನ ಕೆಲವು ಶೆಡ್‌ಗಳಿಗೆ ಭೇಟಿ ನೀಡಿ, ಅಲ್ಲಿನ ವಾಸಿಗಳ ಬಳಿ ಪೌರತ್ವ ಹಾಗೂ ರಾಷ್ಟ್ರೀಯತೆ ಕುರಿತು ಪ್ರಶ್ನೆ ಮಾಡಿದ್ದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ವೀಡಿಯೋಗಳ ಮೂಲಕ ಸರ್ಕಾರ ಮತ್ತು ಆಡಳಿತ ವ್ಯವಸ್ಥೆ ವಿರುದ್ಧ ಅವರು ಪ್ರಶ್ನೆಗಳನ್ನು ಎತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ದೂರು ದಾಖಲಾಗಿದ್ದು, ಅದನ್ನಾಧರಿಸಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.
ಬಂಧನದ ಸುದ್ದಿ ಹೊರಬಿದ್ದ ತಕ್ಷಣ ಪುನೀತ್ ಕೆರೆಹಳ್ಳಿ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ಎಡಪಂಥೀಯ ಒತ್ತಡಕ್ಕೆ ಮಣಿದು ಈ ಕ್ರಮ ಕೈಗೊಂಡಿದೆ ಎಂದು ಆರೋಪಿಸಿ, ಪೊಲೀಸರ ನಡೆ ಖಂಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಸಂದೇಶಗಳನ್ನು ಹಂಚಿಕೊಂಡಿದ್ದಾರೆ.


