ಹೊಸದಿಗಂತ ಬೆಳಗಾವಿ:
ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಠಿಣ ಪ್ರತಿಕ್ರಿಯೆ ನೀಡಿದ್ದಾರೆ.
ನಂದಗಡದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೀರಭೂಮಿ ಹಾಗೂ ವಸ್ತುಸಂಗ್ರಹಾಲಯದ ಉದ್ಘಾಟನಾ ಸಮಾರಂಭದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಖಡಕ್ ಆಗಿ ತಿಳಿಸಿದರು.
“ತಪ್ಪು ಮಾಡಿದವರು ಎಷ್ಟೇ ಪ್ರಭಾವಿ ವ್ಯಕ್ತಿಯಾಗಿರಲಿ ಅಥವಾ ಎಷ್ಟೇ ದೊಡ್ಡ ಅಧಿಕಾರಿಯೇ ಇರಲಿ, ಕಾನೂನಿನ ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳುವುದು ನಿಶ್ಚಿತ” ಎಂದು ಅವರು ಭರವಸೆ ನೀಡಿದರು.
ಮಹಿಳೆಯರ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧ ಸರ್ಕಾರ ಶೂನ್ಯ ಸಹಿಷ್ಣುತೆ ಹೊಂದಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದರು.
ತನಿಖೆಯ ನಂತರ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆಯಾಗಲಿದೆ, ಇದರಲ್ಲಿ ಯಾವುದೇ ಮುಲಾಜಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.


