ಹೊಸದಿಗಂತ ದಾವಣಗೆರೆ:
“ನನ್ನ 43 ವರ್ಷಗಳ ಸುದೀರ್ಘ ರಾಜಕೀಯ ಜೀವನದಲ್ಲಿ ಇಷ್ಟೊಂದು ಭ್ರಷ್ಟ ಮತ್ತು ಅಸಹ್ಯಕರ ಜಿಲ್ಲಾಡಳಿತವನ್ನು ನಾನು ಎಂದೂ ನೋಡಿರಲಿಲ್ಲ,” ಎಂದು ಹರಿಹರ ಶಾಸಕ ಬಿ.ಪಿ. ಹರೀಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಡೆಯುತ್ತಿರುವ ಸಾಲು ಸಾಲು ಅಕ್ರಮಗಳ ಕುರಿತು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ನಡೆಯನ್ನು ಕಠಿಣ ಶಬ್ದಗಳಲ್ಲಿ ಖಂಡಿಸಿದರು.
ಕೃಷಿ ಇಲಾಖೆಯ ಅಧಿಕಾರಿಗಳ ಕಣ್ಣೆದುರೇ ಅಕ್ರಮಗಳು ನಡೆಯುತ್ತಿದ್ದರೂ ಜಿಲ್ಲಾಡಳಿತ ಮೌನ ವಹಿಸಿದೆ. ಅಧಿಕಾರಿಗಳೇ ಇಂತಹ ಕಾನೂನು ಬಾಹಿರ ಚಟುವಟಿಕೆಗಳಿಗೆ ಬೆಂಬಲ ನೀಡುತ್ತಿರುವುದು ಪ್ರಜಾಪ್ರಭುತ್ವಕ್ಕೆ ಅವಮಾನ ಎಂದು ಅವರು ದೂರಿದರು.
ಸಣ್ಣಪುಟ್ಟ ತಪ್ಪು ಮಾಡುವ ಸಾಮಾನ್ಯ ಜನರಿಂದ ದಂಡ ವಸೂಲಿ ಮಾಡುವ ಪೊಲೀಸರು, ಲಾರಿಗಟ್ಟಲೆ ಮಣ್ಣು ಮತ್ತು ಅಕ್ರಮ ಕೃಷಿ ಸಾಮಗ್ರಿಗಳನ್ನು ಸಾಗಿಸುವ ಮಾಫಿಯಾದ ವಿರುದ್ಧ ಏಕೆ ಕ್ರಮ ಕೈಗೊಳ್ಳುತ್ತಿಲ್ಲ? ಎಂದು ಪ್ರಶ್ನಿಸಿದರು. ಕೂಡಲೇ ಎಫ್‌ಐಆರ್ ದಾಖಲಿಸಿ ಅಕ್ರಮ ಲಾರಿಗಳನ್ನು ಜಪ್ತಿ ಮಾಡಬೇಕೆಂದು ಒತ್ತಾಯಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರ ಅಧೀನದಲ್ಲಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲೇ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಯುತ್ತಿದೆ. ಇಂತಹ ಭ್ರಷ್ಟ ಸಚಿವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಇಲ್ಲದಿದ್ದರೆ ಸಚಿವರ ವಿರುದ್ಧವೇ ದೂರು ದಾಖಲಿಸಲು ಹಿಂದೆ ಮುಂದೆ ನೋಡುವುದಿಲ್ಲ ಎಂದು ಎಚ್ಚರಿಸಿದರು.
ಈಗಾಗಲೇ ಈ ಅಕ್ರಮಗಳ ವಿರುದ್ಧ ರಾಜ್ಯ ಬಿಜೆಪಿ ಘಟಕ ಸಂಪೂರ್ಣ ಬೆಂಬಲ ನೀಡಿದ್ದು, ಜಿಲ್ಲಾಡಳಿತವು ತಕ್ಷಣವೇ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಬಿ.ಪಿ. ಹರೀಶ್ ಈ ಸಂದರ್ಭದಲ್ಲಿ ಗುಡುಗಿದ್ದಾರೆ.


