ಹೊಸದಿಗಂತ ವರದಿ,ಮಂಡ್ಯ:
ಕೋಳಿ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಮಳವಳ್ಳಿ ತಾಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಜಯರಾಮು ಅವರ ಮಗ ಗಿರೀಶ್ ಕೊಲೆಯಾದ ಯುವಕನಾಗಿದ್ದು, ಕೊಲೆ ಆರೋಪ ಹಿನ್ನೆಲೆಯಲ್ಲಿ ಅದೇ ಗ್ರಾಮದ ಸಾಗರ್, ತಾಯಮ್ಮ, ಸಹನಾ ಅವರ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾಗರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಅ.6ರಂದು ಗಿರೀಶ್ ಅವರಿಗೆ ಸೇರಿದ ಕೋಳಿಗಳು ತಾಯಮ್ಮ ಅವರ ಮನೆ ಮುಂದೆ ಮೇಯಿಯುತ್ತಿದ್ದ ಹಿನ್ನೆಲೆಯಲ್ಲಿ ತಾಯಮ್ಮ, ಅವರ ಮಕ್ಕಳಾದ ಸಾಗರ್, ಸಹನಾ ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಈ ವಿಚಾರಕ್ಕೆ ಜಗಳ ನಡೆದು ಗಿರೀಶ್ ಅವರ ಮೇಲೆ ಮೂವರು ಹಲ್ಲೆ ನಡೆಸಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗಿರೀಶ್ ಅವರನ್ನು ಕನಕಪುರದ ದಯಾನಂದ ಸಾಗರ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.
11 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಿರೀಶ್ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.