ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಹತ್ತು ದಿನಗಳಿಂದ ಸುರಿದ ನೀರಿಗೆ ಸಿಟಿ ಹೈರಾಣಾಗಿದೆ. ಈಗಾಗಲೇ ಸುರಿದಿರುವ ಮಳೆ ನೀರಿನಿಂದ ಆದ ಅವಸ್ಥೆಯನ್ನು ಸುಧಾರಿಸಿಕೊಳ್ಳಲು ಆಗಿಲ್ಲ. ಆದರೆ ಇನ್ನೂ ಎರಡು ದಿನ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹಿಂಗಾರು ಮಳೆ ರಾಜ್ಯದಲ್ಲಿ ಹಲವು ಅವಾಂತರ ಸೃಷ್ಟಿಸಿದೆ. ಈ ಮಧ್ಯೆ ಕರ್ನಾಟಕದಲ್ಲಿ ಮುಂದಿನ ಐದು ದಿನ ಮಳೆಯಾಗಲಿದ್ದು, ಬೆಂಗಳೂರಿನಲ್ಲಿ 22ರ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಉತ್ತರಕನ್ನಡ, ಉಡುಪಿ, ದಕ್ಷಿಣಕನ್ನಡ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ರಾಜ್ಯದ 13 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ ಕರಾವಳಿ ಭಾಗದ ಜಿಲ್ಲೆಗಳು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ. ಹೀಗಾಗಿ ಮೀನುಗಾರಿಕೆಗೆ ತೆರಳದಂತೆ ಕರಾವಳಿ ಭಾಗದ ಮೀನುಗಾರರಿಗೆ ಸೂಚನೆ ನೀಡಲಾಗಿದೆ