ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭಾನುವಾರ ತಡರಾತ್ರಿ ನಡೆದ ರಸ್ತೆ ಅಪಘಾತವೊಂದು ಭಾರೀ ಆತಂಕ ಮೂಡಿಸಿದೆ. ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್, ಅಗಲಗುರ್ಕಿ ಸಮೀಪ ಸಾಗುತ್ತಿದ್ದ ಕಂಟೇನರ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಅರ್ಧರಾತ್ರಿ ಸುಮಾರು 1 ಗಂಟೆ ವೇಳೆಗೆ ಸಂಭವಿಸಿದ ಈ ದುರ್ಘಟನೆಯಲ್ಲಿ ಒಬ್ಬ ಯುವಕ ಪ್ರಾಣ ಕಳೆದುಕೊಂಡಿದ್ದು, ಇನ್ನೂ 11 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಮೃತ ಯುವಕನನ್ನು ಬಿಹಾರ ಮೂಲದ 20 ವರ್ಷದ ಸುಹಾಸ್ ಎಂದು ಗುರುತಿಸಲಾಗಿದೆ. ಸುಹಾಸ್ ತನ್ನ ಸ್ನೇಹಿತರೊಂದಿಗೆ ಕಂಟೇನರ್ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಎನ್ನಲಾಗಿದೆ.
ಮಾಹಿತಿಯಂತೆ, ಹೊಸ ಬೈಕುಗಳನ್ನು ಸಾಗಿಸುತ್ತಿದ್ದ ಕಂಟೇನರ್ ಲಾರಿ ಹೈದರಾಬಾದ್ ಕಡೆಗೆ ತೆರಳುತ್ತಿತ್ತು. ಅದೇ ವೇಳೆ ಸುಗಮ ಟ್ರಾವೆಲ್ಸ್‌ಗೆ ಸೇರಿದ ಬಸ್ ಅತೀವ ವೇಗದಲ್ಲಿ ಬಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.


