ದೀಪಾವಳಿ ಸಂಭ್ರಮಕ್ಕೆ KSRTC ಸಾಥ್: ಓಡಾಡಲಿದೆ 2,000 ವಿಶೇಷ ಬಸ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೀಪಾವಳಿ ಹಬ್ಬದ ಪ್ರಯುಕ್ತ ಜನರು ತಮ್ಮ ಊರಿನತ್ತ ಹೋಗಲು ಅನುಕೂಲವಾಗಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಸುಮಾರು 2,000 ಹೆಚ್ಚುವರಿ ವಿಶೇಷ ಬಸ್‌ ವ್ಯವಸ್ಥೆ ಕಲ್ಪಿಸಿದೆ.

ಅಕ್ಟೋಬರ್‌ 31 ನರಕ ಚತುರ್ದಶಿ, ನವೆಂಬರ್‌ 1 ಕನ್ನಡ ರಾಜ್ಯೋತ್ಸವ ಹಾಗೂ ನವೆಂಬರ್‌ 2ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್‌ 30ರಿಂದ ನವೆಂಬರ್‌ 1ರ ವರೆಗೆ ಬೆಂಗಳೂರಿನಿಂದ 2,000 ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ನಂತರ ರಾಜ್ಯದ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ನವೆಂಬರ್‌ 3 ಹಾಗೂ ನವೆಂಬರ್‌ 4ರಂದು ವಿಶೇಷ ಬಸ್‌ ಕಾರ್ಯಾಚರಣೆ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್‌ ಇರಲಿದೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ ವಿಶೇಷ ಬಸ್‌ ಸೌಲಭ್ಯ ಇರಲಿದೆ.

ಅದೇ ರೀತಿ ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ನಡೆಸಲಿವೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಸಾರಿಗೆ ನಿಗಮವು ಪ್ರಕಟಣೆಯಲ್ಲಿ ಕೋರಿದೆ.

ಟಿಕೆಟ್‌ ಬುಕಿಂಗ್‌ ಹೇಗೆ?
ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್‌ಸೈಟ್‌ ಮುಖಾಂತರ ಮಾಡಬಹುದಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇ. 5ರಷ್ಟು ರಿಯಾಯಿತಿ, ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಲ್ಲಿ ಬರುವ ಪ್ರಯಾಣ ದರದಲ್ಲಿ ಶೇ. 10ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಸಂಸ್ಥೆಯು ಹೇಳಿದೆ.

ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಸಾರಿಗೆ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ. ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ. ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!