ಹೊಸದಿಗಂತ ಡಿಜಿಟಲ್ ಡೆಸ್ಕ್:
ನಗರದಲ್ಲಿ ಮಾದಕ ದ್ರವ್ಯ ದಂಧೆಗೆ ಬಿಗಿ ಕಡಿವಾಣ ಹಾಕುತ್ತಿರುವ ಬೆಂಗಳೂರು ನಗರ ಪೊಲೀಸರು ಮತ್ತೊಂದು ದೊಡ್ಡ ಯಶಸ್ಸು ಸಾಧಿಸಿದ್ದಾರೆ. ಕೇಂದ್ರ ಅಪರಾಧ ವಿಭಾಗದ ಮಾದಕ ದ್ರವ್ಯ ವಿರೋಧಿ ಘಟಕ ನಡೆಸಿದ ಕಾರ್ಯಾಚರಣೆಯಲ್ಲಿ ಎಂಡಿಎಂಎ ಹಾಗೂ ಎಕ್ಸ್ಟಸಿ ಮಾತ್ರೆಗಳ ಅಕ್ರಮ ಮಾರಾಟ ನಡೆಸುತ್ತಿದ್ದ ಪ್ರಮುಖ ಜಾಲವನ್ನು ಪತ್ತೆಹಚ್ಚಲಾಗಿದೆ.
ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಮಾರತ್ತಹಳ್ಳಿ ಠಾಣೆ ವ್ಯಾಪ್ತಿಯ ಮುನೆಕೊಳಲು ಪ್ರದೇಶದಲ್ಲಿರುವ ಬಾಡಿಗೆ ಮನೆಯಿಂದ ವಿದೇಶಿ ಪ್ರಜೆಯನ್ನು ಬಂಧಿಸಿದ್ದಾರೆ. ಅರ್ನೆಸ್ಟ್ ಒನ್ಯೆಕಾಚಿ ಉಗಾ (45) ಎಂಬ ಆರೋಪಿ, ಅಲ್ಲಿಂದಲೇ ಮಾದಕ ವಸ್ತುಗಳ ಮಾರಾಟ ನಡೆಸುತ್ತಿದ್ದನು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಪೊಲೀಸರ ದಾಳಿಯಲ್ಲಿ 2.5 ಕೆಜಿ ಎಂಡಿಎಂಎ ಮತ್ತು 300 ಎಕ್ಸ್ಟಸಿ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇವುಗಳ ಅಂತಾರಾಷ್ಟ್ರೀಯ ಮಾರುಕಟ್ಟೆ ಮೌಲ್ಯ ಸುಮಾರು 5.15 ಕೋಟಿ ಎಂದು ಅಂದಾಜಿಸಲಾಗಿದೆ. ಬಂಧಿತನ ವಿರುದ್ಧ ಈ ಹಿಂದೆಯೂ ಹೆಣ್ಣೂರು ಹಾಗೂ ಕಾಡುಗೋಡಿ ಪೊಲೀಸ್ ಠಾಣೆಗಳಲ್ಲಿ ಮಾದಕ ವಸ್ತು ಸಂಬಂಧಿತ ಪ್ರಕರಣಗಳು ದಾಖಲಾಗಿದ್ದವು. ಜೈಲಿನಿಂದ ಬಿಡುಗಡೆಯಾದ ಬಳಿಕವೂ ಆತ ಮತ್ತೆ ದಂಧೆ ಆರಂಭಿಸಿದ್ದಾನೆ ಎನ್ನಲಾಗಿದೆ.


