ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭೆಯ ವಿಶೇಷ ಅಧಿವೇಶನವು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ತೀವ್ರ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಭಾಷಣದ ನಂತರ ಕಾಂಗ್ರೆಸ್ ಶಾಸಕರು ಅವರನ್ನು ಅಡ್ಡಗಟ್ಟಿದ ಘಟನೆಯನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರವಾಗಿ ಖಂಡಿಸಿದ್ದು, ಇದನ್ನು ಕರ್ನಾಟಕ ಸಂಸದೀಯ ಇತಿಹಾಸದ ‘ಕರಾಳ ದಿನ’ ಎಂದು ಬಣ್ಣಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆರ್. ಅಶೋಕ್, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು. ರಾಜ್ಯಪಾಲರು ಸಂವಿಧಾನದ ಚೌಕಟ್ಟಿನಲ್ಲೇ ಕಾರ್ಯನಿರ್ವಹಿಸಿದ್ದಾರೆ. ಭಾಷಣ ಓದುವುದು ಅಥವಾ ಬಿಡುವುದು ಅವರಿಗೆ ಇರುವ ಅಧಿಕಾರ. ಅದನ್ನು ಪ್ರಶ್ನಿಸಿ ಅಡ್ಡಗಟ್ಟುವುದು ಗೂಂಡಾಗಿರಿ ಎಂದು ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯಪಾಲರಿಗೆ ಅಗೌರವ ತೋರಿದ ಶಾಸಕರನ್ನು ಸದನದಿಂದ ಹೊರಹಾಕಬೇಕು ಎಂದು ಆಗ್ರಹಿಸಿದ ಅವರು, ಈ ಕುರಿತು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಅಧಿಕೃತ ಪತ್ರ ಬರೆಯುವುದಾಗಿ ತಿಳಿಸಿದರು.
ಸರ್ಕಾರದ ಮಸೂದೆಗಳಿಗೆ ಸಹಿ ಹಾಕುವಾಗ ಒಳ್ಳೆಯವರಾಗುವ ರಾಜ್ಯಪಾಲರು, ಈಗ ಕೆಟ್ಟವರಾಗಿದ್ದು ಹೇಗೆ? ಹೈಕಮಾಂಡ್ ಮೆಚ್ಚಿಸಲು ಲೋಕಭವನವನ್ನು ಕಾಂಗ್ರೆಸ್ ಭವನವನ್ನಾಗಿ ಮಾಡಲು ಸರ್ಕಾರ ಯತ್ನಿಸುತ್ತಿದೆ ಎಂದು ವ್ಯಂಗ್ಯವಾಡಿದರು.
ಇದೇ ವೇಳೆ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ಆರೋಪಿಸಿದರು.
ತನ್ನ ವೈಫಲ್ಯಗಳನ್ನು ಮರೆಮಾಚಲು ಕಾಂಗ್ರೆಸ್ ಸದನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ನರೇಗಾ ಯೋಜನೆಯ ಸುಧಾರಣೆಗಳ ಬಗ್ಗೆ ಸುಳ್ಳು ಪ್ರಚಾರ ಮಾಡುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಅವರು ದೂರಿದರು. 140 ಶಾಸಕರಿದ್ದಾರೆ ಎಂಬ ಅಹಂಕಾರದಿಂದ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ ಎಂದು ವಿಜಯೇಂದ್ರ ಕಿಡಿಕಾರಿದರು.


