ಹೊಸದಿಗಂತ ಬಾಗಲಕೋಟೆ:
ರಾಜ್ಯ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣವನ್ನು ಪೂರ್ಣಗೊಳಿಸದೆ ಹೊರನಡೆದ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಎಸ್.ಆರ್.ಪಾಟೀಲ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಬೆಳವಣಿಗೆಗಳು ಅತ್ಯಂತ ಕಳವಳಕಾರಿ ಎಂದು ಅವರು ಬಣ್ಣಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, “ರಾಜ್ಯಪಾಲರು ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯಬೇಕಾದ ಹೊಣೆಗಾರಿಕೆ ಹೊಂದಿದ್ದಾರೆ. ಆದರೆ, ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದದೆ ಸಬೆಯಿಂದ ಹೊರನಡೆದಿರುವುದು ಸಂವಿಧಾನಾತ್ಮಕ ಬಿಕ್ಕಟ್ಟಿಗೆ ದಾರಿ ಮಾಡಿಕೊಟ್ಟಿದೆ. ರಾಜ್ಯಪಾಲರು ತಮ್ಮನ್ನು ನೇಮಿಸಿದ ಸರ್ಕಾರದ ‘ತುತ್ತೂರಿ’ಯಾಗಬಾರದು, ಬದಲಿಗೆ ಸಂವಿಧಾನದ ರಕ್ಷಕರಾಗಿ ಕರ್ತವ್ಯ ನಿರ್ವಹಿಸಬೇಕು” ಎಂದು ಕಿಡಿಕಾರಿದ್ದಾರೆ.
ಇದೇ ಸಂದರ್ಭದಲ್ಲಿ ದೇಶದ ಸರ್ವೋಚ್ಚ ನ್ಯಾಯಾಲಯದ ಮೇಲೆ ಭರವಸೆ ವ್ಯಕ್ತಪಡಿಸಿದ ಅವರು, ಇಂತಹ ಅಸಂವಿಧಾನಿಕ ನಡೆಯ ವಿರುದ್ಧ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಮಧ್ಯಸ್ಥಿಕೆ ವಹಿಸಬೇಕು. ನಮ್ಮ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಬಾರದಂತೆ ನೋಡಿಕೊಳ್ಳುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.


