ಹೊಸದಿಗಂತ ಕಾರ್ಕಳ:
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯ್ಯಾರು ಎಂಬಲ್ಲಿ ಇಂದು ಖಾಸಗಿ ಬಸ್ ಹಾಗೂ ತೂಫಾನ್ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗುಲ್ಬರ್ಗ ಮೂಲದ ಯಾತ್ರಿಕರು ತೂಫಾನ್ ವಾಹನದಲ್ಲಿ ಧರ್ಮಸ್ಥಳದತ್ತ ಪ್ರಯಾಣಿಸುತ್ತಿದ್ದಾಗ, ಕಾರ್ಕಳದ ಕಡೆಯಿಂದ ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ಸು ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೂಫಾನ್ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ಮೂವರು ದುರ್ಮರಣ ಹೊಂದಿದ್ದಾರೆ.

ವಾಹನದಲ್ಲಿದ್ದ ಇನ್ನುಳಿದ ಐವರು ತೀವ್ರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ಸುದ್ದಿ ತಿಳಿದ ಕೂಡಲೇ ಕಾರ್ಕಳ ನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಮೃತರ ಪೂರ್ಣ ವಿವರಗಳಿಗಾಗಿ ಕಾಯಲಾಗುತ್ತಿದೆ.



