Friday, January 23, 2026
Friday, January 23, 2026
spot_img

ಗಣಿನಾಡಲ್ಲಿ ಕಿಚ್ಚು ಹಚ್ಚಿದ ‘ಮಾಡೆಲ್ ಹೌಸ್’ ಘಟನೆ: ರಾಯಲ್ ವೃತ್ತದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

ಹೊಸದಿಗಂತ ಬಳ್ಳಾರಿ:

ನಗರದ ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹಾಗೂ ಮಾಜಿ ಸಚಿವ ಬಿ. ಶ್ರೀರಾಮುಲು ಅವರಿಗೆ ಸೇರಿದ ‘ಮಾಡೆಲ್ ಹೌಸ್’ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಗಣಿನಾಡಿನಲ್ಲಿ ತೀವ್ರ ಉದ್ವಿಗ್ನತೆ ಸೃಷ್ಟಿಸಿದೆ. ಈ ಕೃತ್ಯವನ್ನು ಖಂಡಿಸಿ ಶುಕ್ರವಾರ ರಾತ್ರಿ ಬಿಜೆಪಿ ಜಿಲ್ಲಾ ಸಮಿತಿ ವತಿಯಿಂದ ನಗರದ ಹೃದಯಭಾಗವಾದ ರಾಯಲ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಬೆಂಕಿ ಹಚ್ಚಿದ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸಬೇಕೆಂದು ಪಟ್ಟು ಹಿಡಿದರು.

ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಡಾ. ಸುಮನ್, ಮಾಜಿ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ ಅವರಿಂದ ಘಟನೆಯ ವಿವರ ಪಡೆದರು. ಈ ವೇಳೆ ಮಾತನಾಡಿದ ಎಸ್‌ಪಿ, “ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಾದ ತಕ್ಷಣ ಕಾನೂನು ಕ್ರಮ ಜರುಗಿಸಲಾಗುವುದು. ತಪ್ಪಿತಸ್ಥರು ಯಾರೇ ಇರಲಿ, ಮುಲಾಜಿಲ್ಲದೆ ಕಠಿಣ ಶಿಕ್ಷೆ ವಿಧಿಸಲಾಗುವುದು” ಎಂದು ಭರವಸೆ ನೀಡುವ ಮೂಲಕ ಕಾರ್ಯಕರ್ತರನ್ನು ಸಮಾಧಾನಪಡಿಸಿದರು.

ಘಟನೆ ಕುರಿತು ಪ್ರತಿಕ್ರಿಯಿಸಿದ ಮಾಜಿ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ, “ನನ್ನ ಸಹೋದರನ ಮನೆಗೆ ಬೆಂಕಿ ಹಚ್ಚಿರುವುದು ಖಂಡನೀಯ. ಬಳ್ಳಾರಿಯಲ್ಲಿ ಶಾಂತಿ ನೆಲೆಸಲು ಪೊಲೀಸರು ತುರ್ತು ಕ್ರಮ ಕೈಗೊಳ್ಳಬೇಕು” ಎಂದರು.

ಈ ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೊಕ, ಮಾಜಿ ಸಂಸದ ಸಣ್ಣ ಫಕೀರಪ್ಪ, ಪಾಲಿಕೆ ಸದಸ್ಯರಾದ ಕೊನಂಕಿ ತಿಲಕ್ ಕುಮಾರ್, ಗೋವಿಂದರಾಜುಲು ಸೇರಿದಂತೆ ಪ್ರಮುಖ ಮುಖಂಡರು ಭಾಗವಹಿಸಿದ್ದರು. ಮುನ್ನೆಚ್ಚರಿಕಾ ಕ್ರಮವಾಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Must Read