ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಗಸ್ಟ್ ನಲ್ಲಿ ನಡೆದ 2023-24ನೇ ಸಾಲಿನ ಕೆಪಿಎಸ್ ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯಲ್ಲಿ ಭಾರಿ ಎಡವಟ್ಟುಗಳು ಕಂಡು ಬಂದ ನಂತರ ಅಭ್ಯರ್ಥಿಗಳ ಆಕ್ರೋಶಕ್ಕೆ ಮಣಿದು ನಿನ್ನೆ ನಡೆಸಲಾದ ಮರುಪರೀಕ್ಷೆಯಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಎಡವಟ್ಟುಗಳ ಮೇಲೆ ಎಡವಟ್ಟುಗಳು ಮಾಡಿದ್ದು, ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಭವಿಷ್ಯ ಡೋಲಾಯಮಾನವಾಗಿದೆ ಎಂದು ಪ್ರತಿಪಕ್ಷ ಬಿಜೆಪಿ ಟೀಕಾ ಪ್ರಹಾರ ನಡೆಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಭಾಷಾಂತರದಲ್ಲಿ ಲೋಪ ದೋಷ, ಒಎಮ್‌ಆರ್ ಶೀಟ್ ಮತ್ತು ನೋಂದಣಿ ಸಂಖ್ಯೆ ಅದಲು ಬದಲು, ಕೆಲವೆಡೆಗಳಲ್ಲಿ 45 ನಿಮಿಷ ತಡವಾಗಿ ಪರೀಕ್ಷೆ ಆರಂಭ ಹೀಗೆ ಸಾಲು ಸಾಲು ಎಡವಟ್ಟುಗಳಿಂದ ಕೂಡಿದ್ದ ಭಾನುವಾರದ ಮರುಪರೀಕ್ಷೆ ಮತ್ತೊಮ್ಮೆ ಅಭ್ಯರ್ಥಿಗಳ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.
ಮರುಪರೀಕ್ಷೆಗೆ ನೋಂದಣಿ ಮಾಡಿಕೊಂಡ್ಡ 2.109 ಲಕ್ಷ ಅಭ್ಯರ್ಥಿಗಳ ಪೈಕಿ ಕೇವಲ 1.005 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದು, ಆಗಸ್ಟ್ ನಲ್ಲಿ ನಡೆದ ಪರೀಕ್ಷೆಯಲ್ಲಿ ಶೇ.62.52ರಷ್ಟಿದ್ದ ಹಾಜರಾತಿ, ಮರುಪರೀಕ್ಷೆಯಲ್ಲಿ ಶೇ.47.7 ರಷ್ಟು ಕುಸಿದಿರುವುದು ಅಭ್ಯರ್ಥಿಗಳು ಸರ್ಕಾರ ಹಾಗೂ ಕೆಪಿಎಸ್ ಸಿ ಮೇಲೆ ನಂಬಿಕೆ ಕಳೆದುಕೊಂಡಿರುವುದಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.
ಸಿಎಂ ಸಿದ್ದರಾಮಯ್ಯ ನವರೇ, ತಮ್ಮ ಸರ್ಕಾರದ ರಾಜಕೀಯ ಹಸ್ತಕ್ಷೇಪ, ಭ್ರಷ್ಟಾಚಾರ, ಸ್ವಜನಪಕ್ಷಪಾತವೆ ಕೆಪಿಎಸ್ ಸಿ ಪರೀಕ್ಷೆಗಳಲ್ಲಿನ ಪದೇ ಪದೇ ಎಡವಟ್ಟಿಗೆ ಕಾರಣ. ಆಗಸ್ಟ್ ನಲ್ಲಿ ನಡೆದ ಪೂರ್ವಭಾವಿ ಪರೀಕ್ಷೆಗೆ 13.40 ಕೋಟಿ ರೂಪಾಯಿ ವೆಚ್ಚವಾಗಿತ್ತು. ಮರುಪರೀಕ್ಷೆಗೂ ಅಷ್ಟೇ ಮೊತ್ತ ಅಥವಾ ಅದಕ್ಕಿಂತ ಹೆಚ್ಚು ಖರ್ಚಾಗಿರುತ್ತದೆ. ಅದರಲ್ಲಿ ಸುಮಾರು 5.3 ಕೋಟಿ ರೂಪಾಯಿ ಪರೀಕ್ಷಾ ಗೌಪ್ಯತೆ ಕಾಪಾಡುವುದಕ್ಕೆ ವೆಚ್ಚ ಮಾಡಲಾಗಿದೆ ಎಂದು ಅಂದಾಜಿಸಲಾಗಿದೆ. ಇಷ್ಟಾದರೂ ಈ ಪರಿ ಎಡವಟ್ಟುಗಳು ಮರುಕಳಿಸಿದೆ ಎಂದರೆ ಇದಕ್ಕೆ ಯಾರು ಹೊಣೆ? ಎಂದು ಪ್ರಶ್ನಿಸಿದ್ದಾರೆ.