ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲಾ ಸಂಘ ಸಂಸ್ಥೆ (ಸರ್ಕಾರಿ ಹಾಗೂ ಖಾಸಗಿ) ಗಳಲ್ಲಿ ಕನ್ನಡ ಧ್ವಜಾರೋಹಣ ಮಾಡುವುದನ್ನು ಕಡ್ಡಾಯ ಮಾಡಿ ಆದೇಶ ಹೊರಡಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ನಮ್ಮ ಮಾತೃಭಾಷೆ, ಈ ನೆಲ, ಜಲ ಕಾಪಾಡಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಬೆಂಗಳೂರಿನಲ್ಲಿ 107 ಭಾಷೆ ಮಾತನಾಡುವ ಜನರಿದ್ದಾರೆ. ಕಳೆದ ವರ್ಷ ಎಲ್ಲಾ ಸಂಘ ಸಂಸ್ಥೆಗಳಲ್ಲೂ ನವೆಂಬರ್ 1 ರಂದು ಸರ್ಕಾರ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕನ್ನಡದ ಧ್ವಜ ಹಾರಿಸುವಂತೆ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದೆ. ನಾನು ಸಂಪೂರ್ಣವಾಗಿ ಯಶಸ್ವಿಯಾಗಿಲ್ಲ, ಆದರೆ ಮುಂದಿನ ದಿನಗಳಲ್ಲಿ ಇದನ್ನು ಕಡ್ಡಾಯ ಮಾಡುವ ಆದೇಶವನ್ನು ಹೊರಡಿಸಲಾಗುವುದು.
ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಅಥವಾ ಪಾಲಿಕೆ ವತಿಯಿಂದ ಎಲ್ಲಾ ಸಂಸ್ಥೆಗಳಿಗೂ ಕನ್ನಡ ಬಾವುಟ ಪೂರೈಸುವ ಕೆಲಸ ಮಾಡುತ್ತೇವೆ. ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಕನ್ನಡರಾಜ್ಯೋತ್ಸವದ ದಿನದಂದು ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವಂತೆ ಸೂಚಿಸಲಾಗುವುದು. ಆ ಮೂಲಕ ಸಣ್ಣ ವಯಸ್ಸಿನಿಂದಲೇ ಮಕ್ಕಳಲ್ಲಿ ಕನ್ನಡದ ವೈಭವವನ್ನು ಬಿತ್ತುವ ಕೆಲಸ ಮಾಡಲಾಗುವುದು” ಎಂದು ತಿಳಿಸಿದರು.