ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಾದ್ಯಂತ 77ನೇ ಗಣರಾಜ್ಯೋತ್ಸವದ ಸಡಗರ ಮನೆಮಾಡಿದ್ದು, ರಾಜಧಾನಿಯ ಕರ್ತವ್ಯ ಪಥದಲ್ಲಿ ಭಾರತದ ಸಾಂಸ್ಕೃತಿಕ ಪರಂಪರೆ ಮತ್ತು ಅದ್ಭುತ ಸೇನಾ ಸಾಮರ್ಥ್ಯದ ಅನಾವರಣವಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಗಣ್ಯರ ಸಮ್ಮುಖದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಸಂಭ್ರಮಕ್ಕೆ ಚಾಲನೆ ನೀಡಿದರು.
ಸ್ವದೇಶಿ ನಿರ್ಮಿತ 105 ಎಂಎಂ ಲೈಟ್ ಫೀಲ್ಡ್ ಗನ್‌ಗಳ ಮೂಲಕ 21 ಫಿರಂಗಿಗಳ ಸಲಾಮಿ ನೀಡಲಾಯಿತು. 172 ಫೀಲ್ಡ್ ರೆಜಿಮೆಂಟ್‌ನ ಸೆರಿಮೋನಿಯಲ್ ಬ್ಯಾಟರಿಯು ಈ ಗೌರವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಿರ್ವಹಿಸಿತು.
‘ವಂದೇ ಮಾತರಂ’ ರಚನೆಯಾಗಿ 150 ವರ್ಷಗಳಾದ ಹಿನ್ನೆಲೆಯಲ್ಲಿ ಈ ಬಾರಿಯ ಎಲ್ಲ ಕಾರ್ಯಕ್ರಮಗಳನ್ನು ಇದೇ ಥೀಮ್ ಅಡಿಯಲ್ಲಿ ಆಯೋಜಿಸಲಾಗಿತ್ತು.
ಪರೇಡ್‌ನಲ್ಲಿ ‘ಆಪರೇಷನ್ ಸಿಂಧೂರ ಮಿಷನ್’ ವಿಶೇಷ ಗಮನ ಸೆಳೆಯಿತು. ಭಾರತದ ಅಭಿವೃದ್ಧಿ ವೇಗ ಮತ್ತು ಮಿಲಿಟರಿ ಶಕ್ತಿಯನ್ನು ಬಿಂಬಿಸುವ ಸ್ತಬ್ಧಚಿತ್ರಗಳು ಪ್ರೇಕ್ಷಕರನ್ನು ರೋಮಾಂಚನಗೊಳಿಸಿದವು.
ಈ ಬಾರಿಯ ಗಣರಾಜ್ಯೋತ್ಸವಕ್ಕೆ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಹಾಗೂ ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ರಾಷ್ಟ್ರಪತಿಗಳು ಇಬ್ಬರೂ ಗಣ್ಯರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಭೂಸೇನೆ, ವಾಯುಸೇನೆ ಮತ್ತು ನೌಕಾಸೇನೆಯ ಮುಖ್ಯಸ್ಥರು ಉಪಸ್ಥಿತರಿದ್ದರು.




