ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಧಮ್ಕಿ ಹಾಕಿದ ಆರೋಪದಲ್ಲಿ ಪರಾರಿಯಾಗಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸುಮಾರು 13 ದಿನಗಳಿಂದ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಕೇರಳದಿಂದ ಗೋವಾಗೆ ತೆರಳುವ ವೇಳೆ ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸ್ಥಳೀಯ ಪೊಲೀಸರು ಇದನ್ನು ಖಚಿತ ಪಡಿಸಿಲ್ಲ.
ಸಚಿವ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ ಅಭಿನಯದ ‘ಕಲ್ಟ್’ ಸಿನಿಮಾದ ಫ್ಲೆಕ್ಸ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ ರಾಜೀವ್ ಗೌಡ ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಆರೋಪ ಕೇಳಿಬಂದಿತ್ತು. ಈ ಸಂಬಂಧದ ಆಡಿಯೋ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದಂತೆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿತ್ತು. ನಂತರ ರಾಜೀವ್ ಗೌಡ ಕ್ಷಮೆ ಕೋರಿದ್ದರೂ, ಪೌರಾಯುಕ್ತೆ ಅಮೃತಾ ಗೌಡ ಪೊಲೀಸರಿಗೆ ದೂರು ನೀಡಿದ್ದರು.
ಪ್ರಕರಣ ದಾಖಲಾಗುತ್ತಿದ್ದಂತೆಯೇ ರಾಜೀವ್ ಗೌಡ ಮೊಬೈಲ್ಗಳನ್ನು ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದರು. ಜಾಮೀನು ಪಡೆಯಲು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದರಿಂದ ಬಂಧನ ಅನಿವಾರ್ಯವಾಗಿತ್ತು.
ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸಿ ಸೂಚನೆಯಂತೆ ರಚಿಸಿದ ಎರಡು ವಿಶೇಷ ತಂಡಗಳು ಶೋಧ ಕಾರ್ಯ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿವೆ. ರಾಜೀವ್ ಗೌಡನನ್ನು ನಾಳೆ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.




